ಸುಳ್ಯ: ಕೊರೋನಾ ಮಹಾಮಾರಿಯನ್ನು ಎದುರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿರುವ ಸಂದರ್ಭದಲ್ಲಿ ಜನರ ಸಂಕಷ್ಟಕ್ಕೆ ಸ್ಪಂದಿಸಿದ ಕೆಪಿಸಿಸಿ ಆರೋಗ್ಯ ಹಸ್ತ ಕಾರ್ಯಕ್ರಮವನ್ನು ರೂಪಿಸುವುದರ ಮೂಲಕ ದೇಶಕ್ಕೆ ಮಾದರಿ ಕಾರ್ಯಕ್ರಮವನ್ನು ನೀಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಹೇಳಿದ್ದಾರೆ.
ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೆಳ್ಳಾರೆಯ ದರ್ಖಾಸ್ತಿನಲ್ಲಿ ನಡೆದ ಆರೋಗ್ಯ ಹಸ್ತ ಮತ್ತು ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊರೋನಾ ತಡೆಯುವಲ್ಲಿ ಸಂಪೂರ್ಣ ವಿಫಲವಾಗಿರುವ ರಾಜ್ಯ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದ ಅವರು ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ, ಡ್ರಗ್ಸ್ ಹಾವಳಿಯನ್ನು ತಡೆಯಲು ಸರ್ಕಾರದಿಂದ ಸಾಧ್ಯವಾಗಿಲ್ಲ ಎಂದು ಹೇಳಿದರು.
ವಿಧಾನಪರಿಷತ್ನ ವಿರೋಧ ಪಕ್ಷದ ಮುಖ್ಯ ಸಚೇತಕ ನಾರಾಯಣ ಸ್ವಾಮಿ ಮಾತನಾಡಿದರು.
ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಬಾಲರಾಜ್, ಭರತ್ ಮುಂಡೋಡಿ, ಡಾ.ಬಿ.ರಘು, ಟಿ.ಎಂ.ಶಹೀದ್, ಎಂ.ವೆಂಕಪ್ಪ ಗೌಡ, ಧನಂಜಯ ಅಡ್ಪಂಗಾಯ, ರಾಜೀವಿ ಆರ್ ರೈ, ನಂದಕುಮಾರ್, ಅನಿಲ್ ರೈ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್, ವಹೀದಾ ಇಸ್ಮಾಯಿಲ್, ಶಕುಂತಲಾ ನಾಗರಾಜ್, ರಮಾನಾಥ್ ಕರಿಕೆ ಮತ್ತಿತರರು ಉಪಸ್ಥಿತರಿದ್ದರು. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ಸ್ವಾಗತಿಸಿದರು. ಸಚಿನ್ರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.