ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಹಾಗೂ ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಯ ಸಹಯೋಗದಲ್ಲಿ ನಾರಾವಿ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ಶುಕ್ರವಾರ ನಿಟ್ಟಡೆ ಕುಂಭಶ್ರೀ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ಜರಗಿತು.
ಕುಕ್ಕೇಡಿ ಗ್ರಾ.ಪಂ. ಅಧ್ಯಕ್ಷ ಜನಾರ್ಧನ ಪೂಜಾರಿ ಅವರು ಸಮಾರಂಭವನ್ನು ಉದ್ಘಾಟಿಸಿ, ಮಕ್ಕಳಲ್ಲಿ ಅಡಗಿರುವ ವಿವಿಧ ರೀತಿಯ ಪ್ರತಿಭೆಗಳನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಸ್ಪರ್ಧಾ ಕಾರ್ಯಕ್ರಮಗಳು ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಸಹಕಾರಿ ಆಗಿದೆ ಎಂದರು.
ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಎಚ್. ಅವರು ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಂಯೋಜಕಿ ಚೇತನಾಕ್ಷಿ, ವೇಣೂರು ವರ್ತಕರ ಸಂಘದ ಅಧ್ಯಕ್ಷ ಕೆ. ಭಾಸ್ಕರ ಪೈ ಶುಭ ಹಾರೈಸಿದರು. ತಾಲೂಕು ಪ್ರೌಡ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಮೇಶ್ ಮಯ್ಯ, ಕುಂಭಶ್ರೀ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಅಶ್ವಿತ್ ಕುಲಾಲ್, ಮುಖ್ಯ ಶಿಕ್ಷಕಿ ಉಷಾ ಜಿ, ಪ್ರಾಚಾರ್ಯೆ ಓಮನಾ, ಸಿರ್ಪಿ ಆರತಿ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ಭಟ್, ಕುಕ್ಕೇಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷ ಗಣೇಶ್ ಕುಂದರ್ ಮತ್ತಿತರರು ಉಪಸ್ಥಿತರಿದ್ದರು.
ಕುಂಭಶ್ರೀ ವೈಭವ ಆಚರಣೆ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ ಸ್ವಾಗತಿಸಿದರು. ಶಿಕ್ಷಕ-ರಕ್ಷಕ ಸಂಘದ ಸದಸ್ಯೆ ಮೀನಾಕ್ಷಿ ವಂದಿಸಿದರು. ಶಿಕ್ಷಕಿಯರಾದ ದೀಪಾ ಆಚಾರ್ಯ ಮತ್ತು ಭವಾನಿದಿವ್ಯ ನಿರೂಪಿಸಿದರು.