ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಅಭಿವೃದ್ಧಿ ಮಂಡಳಿಯನ್ನಾಗಿ ಪರಿವರ್ತಿಸಲು ಸರಕಾರ ಚಿಂತನೆ ನಡೆಸಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ ಸುಧಾಕರ್ ಹೇಳಿದ್ದಾರೆ.
ಜುಲೈ 1ರ ಶನಿವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯದ ಕರಾವಳಿ ಪ್ರದೇಶದ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ. ಮೂರು ಜಿಲ್ಲೆಗಳ ಶಾಸಕರು ಹಾಗೂ ಎಂಎಲ್ ಸಿ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದರು.
‘ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನು ಆದ್ಯತೆ ಮೇರೆಗೆ ಅಗತ್ಯಕ್ಕೆ ಬಳಸಬೇಕೇ ಹೊರತು ಇತರೆ ಯೋಜನೆಗಳಿಗೆ ಬಳಸಬಾರದು. ತೂಗು ಸೇತುವೆ, ಕಾಲು ಸೇತುವೆ, ಶಾಲಾ ಕಟ್ಟಡ ಅಭಿವೃದ್ಧಿ ಹಾಗೂ ಮೀನು ಮಾರುಕಟ್ಟೆಯನ್ನು ಕೈಗೆತ್ತಿಕೊಳ್ಳಲಾಗುವುದು. ಒಣ ಮೀನು ಸಂಸ್ಕರಣೆಯಲ್ಲಿ ಮಹಿಳೆಯರಿಗೆ ಅಗತ್ಯ ತರಬೇತಿ ನೀಡಲಾಗುವುದು ಎಂದರು.
ಎಂಎಲ್ಸಿ ಮಂಜುನಾಥ ಭಂಡಾರಿ ಮಾತನಾಡಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಧಿಯ ಬಳಕೆಗೆ ನೀಲನಕ್ಷೆ ಅಗತ್ಯವಿದ್ದು, ಈ ಸಂಬಂಧ ಸಚಿವರು ನಿರ್ದೇಶನ ನೀಡುವಂತೆ ಮನವಿ ಮಾಡಿದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿಸೋಜ ಮಾತನಾಡಿ, ಮೂರು ಜಿಲ್ಲೆಗಳಲ್ಲಿಅಗತ್ಯಕ್ಕೆ ಅನುಗುಣವಾಗಿ ವಿವಿಧ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು. ಎಂಎಲ್ಸಿ ಕೆ ಹರೀಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.