ಮಂಗಳೂರು: ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರೊಬ್ಬರನ್ನು ಬಂಧಿಸಲಾಗಿದೆ. ಕಾಂಗ್ರೆಸ್ ಮುಖಂಡ ಪುನೀತ್ ಶೆಟ್ಟಿ ಅವರು ಉರ್ವಾ ಪೊಲೀಸ್ ಠಾಣೆಯ ಅಧಿಕಾರಿಗೆ ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಬೆದರಿಕೆ ಹಾಕಿದ ಪುನಿತ್ ಶೆಟ್ಟಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.
ಕಂಕನಾಡಿ ಟೌನ್ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿರುವ ಪುನೀತ್ ಶೆಟ್ಟಿ ವಿರುದ್ಧ ಐಪಿಸಿ ಸೆಕ್ಷನ್ 353,506,507 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತನಿಂದ ಪರವಾನಗಿ ಇರುವ ಪಿಸ್ತೂಲು ಹಾಗು 6 ಸಜೀವ ಗುಂಡು, ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಆರೋಪಿ ಪುನೀತ್ ಶೆಟ್ಟಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ 15 ದಿನ ನ್ಯಾಯಾಂಗ ಬಂಧನ ವಿಧಿಸಿದೆ.