ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಂಗಳೂರು ವಕೀಲರ ಸಂಘದ ನೇತೃತ್ವದಲ್ಲಿ ಅರೆಕಾಲಿಕ ಸ್ವಯಂ ಸೇವಕರಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಮಂಗಳೂರು ನ್ಯಾಯಾಲಯ ಸಂಕೀರ್ಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಜೋಷಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಪೃಥ್ವಿರಾಜ್ ರೈ ವಹಿಸಿದರು. ಗೌರವ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶೋಭಾ ಮುಖ್ಯ ಅತಿಥಿಯಾಗಿದ್ದರು.
ಸಂವಿಧಾನ ಹಕ್ಕುಗಳು ಮತ್ತು ಕರ್ತವ್ಯಗಳು, ಬಾಲ ನ್ಯಾಯ ಕಾಯಿದೆ, ಮಕ್ಕಳ ಹಕ್ಕುಗಳ ರಕ್ಷಣೆ, ಕುಟುಂಬ ಮತ್ತು ವಿವಾಹ ಕುರಿತ ಕಾನೂನು, ಕ್ರಿಮಿನಲ್ ಕಾನೂನು ಮೊದಲಾದ ವಿಷಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನ ಸ್ವಯಂ ಸೇವಕರು ಭಾಗವಹಿಸಿದ್ದರು.