ಉಡುಪಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿ ಕೇಂದ್ರ ಬಿಜೆಪಿ ವರಿಷ್ಠರಿಗೆ ಪತ್ರ ಬರೆದಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಸಂತೋಷ್ ಪಾಟೀಲ್ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಶೇ.40ರಷ್ಟು ಗುತ್ತಿಗೆಗಳಲ್ಲಿ ಕಮೀಷನ್ ಕೇಳುತ್ತಿದ್ದಾರೆ. ಈ ಬಗ್ಗೆ ಸಚಿವ ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಕೇಂದ್ರದ ವರಿಷ್ಠರಿಗೆ ಸಂತೋಷ್ ಪಾಟೀಲ್ ದೂರು ನೀಡಿದ್ದರು.
ಈ ನಡುವೆ ನನ್ನ ಸಾವಿಗೆ ಸಚಿವ ಕೆ.ಎಸ್. ಈಶ್ವರಪ್ಪ ಕಾರಣ ಎಂದು ನಾಪತ್ತೆಗೂ ಮುನ್ನ ಸಂತೋಷ್ ಪಾಟೀಲ್ ವಾಟ್ಸಪ್ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ನಾಪತ್ತೆಯಾಗಿದ್ದ ಸಂತೋಷ್ ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದರು. ಈ ಬೆನ್ನಲ್ಲೇ, ಉಡುಪಿಯ ಶಾಂಭವಿ ಹೋಟೆಲ್ ನಲ್ಲಿ ಗುತ್ತಿಗೆದಾರ ಸಂತೋಷ್ ಕೆ ಪಾಟೀಲ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.