ಉಡುಪಿ : ಜಿಲ್ಲೆಯಲ್ಲಿ ಬುಧವಾರ ಕೇವಲ ಒಬ್ಬರಲ್ಲಿ ಮಾತ್ರ ಕೋವಿಡ್ ಸೋಂಕು ಪತ್ತೆಯಾಗಿದ್ದು, ಎಂಟು ಮಂದಿ ರೋಗದಿಂದ ಗುಣಮುಖರಾಗಿದ್ದಾರೆ. ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ 29ಕ್ಕಿಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ದಿನದಲ್ಲಿ ಪಾಸಿಟಿವ್ ಬಂದ ಪುರುಷರೊಬ್ಬರು ಕಾರ್ಕಳದವರು. ಇವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬುಧವಾರ ಸಹ ಜಿಲ್ಲೆಯಲ್ಲಿ ಸೋಂಕಿಗೆ ಯಾರೂ ಬಲಿಯಾಗಿಲ್ಲ.
ಮಂಗಳವಾರ ಸೋಂಕಿನಿಂದ 8 ಮಂದಿ ಗುಣಮುಖರಾಗುವ ಮೂಲಕ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 76,458ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 2912 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,964ಕ್ಕೇರಿದೆ.
2,085 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು 2,085 ಮಂದಿ ಕೋವಿಡ್ ಲಸಿಕೆ ಸ್ವೀಕರಿಸಿದ್ದಾರೆ. ಇವರಲ್ಲಿ 266 ಮಂದಿ ಮೊದಲ ಡೋಸ್ ಹಾಗೂ 1819 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 159 ಮಂದಿ ಮೊದಲ ಡೋಸ್ ಹಾಗೂ 1119 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 107 ಮಂದಿ ಮೊದಲ ಡೋಸ್ ಹಾಗೂ 698 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಅಲ್ಲದೇ ಇಬ್ಬರು ಮುಂಚೂಣಿ ಕಾರ್ಯಕರ್ತರು ಸಹ ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.