ಉಡುಪಿ : ನಗರದ ಎಂಜಿಎಂ ಕಾಲೇಜಿನಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷ ತೀವ್ರಗೊಂಡ ಹಿನ್ನೆಲೆಯಲ್ಲಿ ಕಾಲೇಜಿಗೆ ರಜೆ ಘೋಷಿಸಲಾಗಿದೆ. ನ್ಯಾಯಾಲಯದ ತೀರ್ಪಿನ ಅನ್ವಯ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಪ್ರಾಂಶುಪಾಲ ಡಾ.ದೇವಿದಾಸ್ ನಾಯಕ್ ತಿಳಿಸಿದ್ದಾರೆ.
ಬೆಳಿಗ್ಗೆ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಹಿಜಾಬ್ ಧರಿಸಿ ತರಗತಿ ಪ್ರವೇಶಕ್ಕೆ ಅನುಮತಿ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಯಾಗಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಪೇಟ, ಶಾಲು ಧರಿಸಿ ಜೈಶ್ರೀರಾಮ್ ಘೋಷಣೆ ಮೊಳಗಿಸಿದರು.
ಕಾಲೇಜಿನ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಹಿಜಾಬ್ ಧರಿಸಿದ್ದ ಹಾಗೂ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳನ್ನು ಕಾಲೇಜು ಆವರಣದಿಂದ ಹೊರಗೆ ಕಳಿಸಿದರು. ಬಳಿಕ ವಿದ್ಯಾರ್ಥಿಗಳ ಗುಂಪನ್ನು ಚದುರಿಸಲಾಯಿತು.