ಉಡುಪಿ: ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೊಳಪಡಿಸಿ ಹಂತಹಂತವಾಗಿ ಖಾಯಂಗೊಳಿಸುವಂತೆ ಆಗ್ರಹಿಸಿ ಹೊರಗುತ್ತಿಗೆ ನೌಕರರು ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಪೌರಕಾರ್ಮಿಕರ ನೇರನೇಮಕಾತಿಯನ್ನು ಸ್ವಾಗತಿಸುತ್ತೇವೆ. ಆದರೆ ಒಂದೇ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವರ ಮಧ್ಯೆ ಒಡೆದಾಳುವ ನೀತಿ ಅನುಸರಿಸುವುದು ಸರಕಾರಕ್ಕೆ ಶೋಭೆತರಲ್ಲ. ಈಗಲೂ ಸಹ ಹೊರಗುತ್ತಿಗೆ ನೌಕರರನ್ನು ಗುತ್ತಿಗೆಯಲ್ಲೆ ಮುಂದುವರಿಸುವ ಸರಕಾರದ ನೀತಿ ಒಂದುಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಎಂಬಂತಾಗಿದೆ ಎಂದು ನೌಕರರು ಆಕ್ರೋಶ ವ್ಯಕ್ತಪಡಿಸಿದರು.
ಸರಕಾರ ಕೂಡಲೇ ಎಚ್ಚೆತ್ತುಕೊಂಡು ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿಯೇ ನೇರಪಾವತಿಗೊಳಪಡಿಸಿ ಹಂತಹಂತವಾಗಿ ಖಾಯಂಗೊಳಿಸಬೇಕು. ಇಲ್ಲದಿದ್ದರೆ, ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.