ಉಡುಪಿ: ಮಕರ ಸಂಕ್ರಾಂತಿ ಅಂಗವಾಗಿ ಉಡುಪಿ ಶ್ರೀಕೃಷ್ಣ ಮಠದಲ್ಲಿ ಬ್ರಹ್ಮರಥ ಸಹಿತ ಮೂರು ರಥೋತ್ಸವ ಇಂದು ರಾತ್ರಿ ನಡೆಯಿತು.
ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಸಂಭ್ರಮ ಸಡಗರದಿಂದ ರಥೋತ್ಸವದಲ್ಲಿ ಜರುಗಿತು. ಸಾವಿರಾರು ಸಂಖ್ಯೆಯ ಭಕ್ತಾದಿಗಳು ದೇವರ ದರ್ಶನ ಪಡೆದು, ಮೂರು ರಥೋತ್ಸವದ ವೈಭವವನ್ನು ಕಣ್ತುಂಬಿಕೊಂಡರು.
ಶ್ರೀಕೃಷ್ಣ, ಮುಖ್ಯಪ್ರಾಣ, ಅನಂತೇಶ್ವರ, ಚಂದ್ರಮೌಳೀಶ್ವರ ದೇವರ ಉತ್ಸವ ಮೂರ್ತಿಗಳನ್ನು ಮೂರು ರಥಗಳಲ್ಲಿ ಇರಿಸಿ ವೈಭವದಿಂದ ಪೂಜೆ ಸಲ್ಲಿಸಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ತೆಪ್ಪೋತ್ಸವ ನಡೆದ ಬಳಿಕ ರಥೋತ್ಸವ ನಡೆಯಿತು.
ರಥಬೀದಿ ಸುತ್ತಲೂ ವಿದ್ಯುತ್ ಅಲಂಕಾರಗಳಿಂದ ಶೃಂಗಾರ ಮಾಡಲಾಗಿತ್ತು. ಆಕರ್ಷಕ ಸುಡುಮದ್ದು, ನಾಸಿಕ್ ಬ್ಯಾಂಡ್ ರಥೋತ್ಸವ ಸೊಬಗನ್ನು ಇಮ್ಮಡಿಗೊಳಿಸಿತು.
ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರತೀರ್ಥ ಶ್ರೀಪಾದರು, ಪಲಿಮಾರು ಮಠದ ವಿದ್ಯಾಧೀಶತೀರ್ಥ ಸ್ವಾಮೀಜಿ, ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಕಾಣಿಯೂರು ಮಠದ ವಿದ್ಯಾವಲ್ಲಭತೀರ್ಥ ಸ್ವಾಮೀಜಿ, ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿ, ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ, ಶಿರೂರು ಮಠದ ವೇದವರ್ಧನತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು.