ಕಾರವಾರ: ಫುಟ್ಪಾತ್ನಲ್ಲಿ ನಿಂತು ವ್ಯಾಪಾರ ಮಾಡಬೇಡಿ ಎಂದಿದ್ದಕ್ಕೆ ಕೆಲ ಬೀದಿ ಬದಿ ವ್ಯಾಪಾರಿಗಳು ನಗರಸಭೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ನಗರದ ಸಿದ್ಧಿ ವಿನಾಯಕ ದೇವಸ್ಥಾನ ಬಳಿ ಗುರುವಾರ ನಡೆದಿದೆ.
ಇಲ್ಲಿನ ಈಜುಕೊಳದ ಬಳಿ ಹೂ ಮತ್ತು ಹಣ್ಣು ಮಾರಾಟ ಮಾಡುವ ಬೀದಿ ವ್ಯಾಪಾರಿಗಳಿಗಾಗಿ ನಗರಸಭೆ ಪ್ರತ್ಯೇಕ ಮಾರುಕಟ್ಟೆ ನಿರ್ಮಿಸಿ ಕೊಟ್ಟಿದೆ. ಆದರೂ ಕೆಲವರು ಫುಟ್ಪಾತ್ ಮೇಲೆ ಬಂದು ವ್ಯಾಪಾರ ಮಾಡುತ್ತಿರುವುದನ್ನು ಗಮನಿಸಿ ನಗರಸಭೆ ಸಿಬ್ಬಂದಿ ಸ್ಥಳಕ್ಕೆ ಬಂದು ವ್ಯಾಪಾರಿಗಳನ್ನು ಪ್ರಶ್ನಿಸಿದ್ದಾರೆ. ಈ ವೇಳೆ ನಗರಸಭೆ ಸಿಬ್ಬಂದಿ ಮತ್ತು ವ್ಯಾಪಾರಿಗಳ ಮಧ್ಯೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವ್ಯಾಪಾರಿಗಳನ್ನು ನಗರಸಭೆ ಅಧಿಕಾರಿಗಳು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವ್ಯಾಪಾರಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು. ನಗರದ ಪ್ರಮುಖ ಪ್ರದೇಶದಲ್ಲಿಯೇ ಈ ಘಟನೆ ನಡೆದಿದ್ದರಿಂದ ಕೆಲ ಹೊತ್ತಿನವರೆಗೆ ಸಂಚಾರ ದಟ್ಟಣೆ ಉಂಟಾಗಿತ್ತು.