ಮಡಿಕೇರಿ : ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ.

ಕವನ್ (24) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೂಲಗಳ ಪ್ರಕಾರ, ಮೃತ ಯುವಕ ಇತ್ತೀಚಿನ ದಿನಗಳಲ್ಲಿ ಸ್ಟಾಕ್ ಮಾರ್ಕೆಟ್‌ನಲ್ಲಿ ದೊಡ್ಡ ಪ್ರಮಾಣದ ಹಣವನ್ನು ಹೂಡಿಕೆ ಮಾಡಿದ್ದ ಎನ್ನಲಾಗಿದೆ. ಆದರೆ ಮಾರುಕಟ್ಟೆಯ ದಿಢೀರ್ ಕುಸಿತದಿಂದಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ಈ ಆರ್ಥಿಕ ಹೊಡೆತದಿಂದ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ, ಸಾಲಬಾಧೆ ಹಾಗೂ ಭವಿಷ್ಯದ ಆತಂಕದಿಂದ ಈ ತೀವ್ರ ನಿರ್ಧಾರ ಕೈಗೊಂಡಿದ್ದಾನೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಡಿಜಿಟಲ್ ಯುಗದಲ್ಲಿ ಸುಲಭವಾಗಿ ಹಣ ಗಳಿಸುವ ಆಸೆಗೆ ಬಿದ್ದು ಯುವ ಪೀಳಿಗೆ ಷೇರು ಮಾರುಕಟ್ಟೆ ಹಾಗೂ ಕ್ರಿಪ್ಟೋ ಹೂಡಿಕೆಗಳತ್ತ ಆಕರ್ಷಿತರಾಗುತ್ತಿದ್ದಾರೆ. ಆದರೆ ಸೂಕ್ತ ಜ್ಞಾನವಿಲ್ಲದೆ ದೊಡ್ಡ ಮೊತ್ತದ ಹಣ ಹೂಡಿ ಪ್ರಾಣ ಕಳೆದುಕೊಳ್ಳುತ್ತಿರುವುದು ಆತಂಕ ಮೂಡಿಸಿದೆ.