ಮಂಡ್ಯ: ಜಿಲ್ಲೆಯಲ್ಲಿರುವ ಎಲ್ಲಾ ಶಾಲಾ ಕಾಲೇಜುಗಳ ಆವರಣದಿಂದ 100 ಮೀಟರ್ ವ್ಯಾಪ್ತಿಯಲ್ಲಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ತಂಬಾಕು ಮಾರಾಟ ಮಾಡುವಂತಿಲ್ಲ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನುರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಬಿ.ಸಿ ಶಿವಾನಂದಮೂರ್ತಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ನಡೆಸಿ ಮಾತನಾಡಿ, ಜಿಲ್ಲೆಯಲ್ಲಿನ ಅಂಗನವಾಡಿ, ಶಾಲಾ, ಕಾಲೇಜು, ಸಾರ್ವಜನಿಕ ಆವರಣದ ಬಳಿ 100 ಮೀಟರ್ ಅಂತರದ ಒಳಗೆ ಯಾವುದೇ ತಂಬಾಕು ಮಾರಾಟ ಮಾಡುವ ಅಂಗಡಿಗಳು ಇದ್ದರೆ ಅವರ ವಿರುದ್ಧ ಸೂಕ್ತ ಕ್ರಮ ವಹಿಸಿ, ಅಂತಹ ಅಂಗಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಹಾಗೂ ನಗರಸಭೆಗೆ ಇಲಾಖೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆಲವು ಶಾಲಾ ಕಾಲೇಜು ಆವರಣದ ಸುತ್ತಮುತ್ತ ತಂಬಾಕು ಮಾರಾಟ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿದೆ. ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರು ತಮ್ಮ ಶಾಲೆಯ ಸುತ್ತಮುತ್ತಲು 100ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟವಾಗುತ್ತಿಲ್ಲ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು. ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಗಳ ಬಗ್ಗೆ ಅರಿವು ಮೂಡಿಸಿ ಇದರ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿ ಜಿಲ್ಲೆಯನ್ನು ತಂಬಾಕು ಮುಕ್ತ ವಲಯವನ್ನಾಗಿ ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಂಬಾಕು ಮುಕ್ತ ಯುವ ಅಭಿಯಾನ 2.೦ ನಡೆಸಿದ ಸಾಧನೆಯ ಕುರಿತು ವಿವರಿಸಲಾಯಿತು, ಹಾಗೂ ತಂಬಾಕು ಮುಕ್ತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವಂತೆ ಅಪರ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.

ಇದೇ ಸಂದರ್ಭದಲ್ಲಿ ತಂಬಾಕು ನಿಯಂತ್ರಣ ವಿಷಯ ಕುರಿತು ಸಭೆಯಲ್ಲಿ ಭಿತ್ತಿ ಪತ್ರ ಬಿಡುಗಡೆ ಮಾಡಲಾಯಿತು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಮೋಹನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಗಂಗಾಧರಸ್ವಾಮಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಕೆ.ಪಿ. ಅಶ್ವಥ್, ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ, ಕು?ರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ, ಮಲೇರಿಯಾ ನಿಯಂತ್ರಣಾಧಿಕಾರಿ ಡಾ ಕಾಂತರಾಜ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.