ಮಂಗಳೂರು: ಜಿಲ್ಲೆಯ ಸರಕಾರಿ ಶಾಲೆಗಳಲ್ಲಿ ಸೋಮವಾರದಿಂದ ಹೊಸ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಆರಂಭಗೊಳ್ಳಲಿದ್ದು, ಶಾಲಾ ಆರಂಭೋತ್ಸವದ ಸಂಭ್ರಮಕ್ಕೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಬೇಸಗೆ ರಜೆ ಬಳಿಕ ಶಾಲೆಗೆ ಮರಳುತ್ತಿರುವ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲು ಶಾಲೆಗಳು ಸಜ್ಜಾಗಿವೆ.
ಹೊಸ ಶೈಕ್ಷಣಿಕ ವರ್ಷದ ಮೊದಲ ದಿನ ಶಾಲಾ ಆರಂಭೋತ್ಸವವನ್ನು ಹಬ್ಬದ ವಾತಾವರಣದಲ್ಲಿ ಆಚರಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಸಮವಸ್ತ್ರ, ವಿ ಪಠ್ಯಪುಸ್ತಕಗಳನ್ನು ವಿತರಿಸುವುದರ ಜತೆಗೆ ಸಿಹಿ ತಿಂಡಿ ಹಂಚುವ ಕಾರ್ಯಕ್ರಮವೂ ನಡೆಯಲಿದೆ. ಮೊದಲ ಬಾರಿಗೆ ಶಾಲೆಗೆ ಸೇರುವ ಪುಟಾಣಿಗಳಿಗೆ ವಿಶೇಷ ಸ್ವಾಗತ ನೀಡಲು ಹಲವು ಶಾಲೆಗಳು ಯೋಜನೆ ರೂಪಿಸಿವೆ.
ಶೈಕ್ಷಣಿಕ ಚಟುವಟಿಕೆಗಳ ಆರಂಭದೊಂದಿಗೆ ಸೇತುಬಂಧ ತರಗತಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಕಳೆದ ವರ್ಷದ ಕಲಿಕೆ ಮತ್ತು ಹೊಸ ತರಗತಿಯ ಪಠ್ಯಕ್ರಮದ ನಡುವಿನ ಅಂತರವನ್ನು ಕಡಿಮೆಗೊಳಿಸುವ ಉದ್ದೇಶದಿಂದ ಕೆಲವು ದಿನಗಳ ಕಾಲ ಸೇತುಬಂಧ ಚಟುವಟಿಕೆಗಳನ್ನು ನಡೆಸಲಾಗುತ್ತದೆ. ಮಕ್ಕಳ ಕಲಿಕ ಮಟ್ಟವನ್ನು ಅಂದಾಜಿಸಿ ಅಗತ್ಯ ಮಾರ್ಗದರ್ಶನ ನೀಡಲು ಶಿಕ್ಷಕರು ಸಿದ್ಧತೆ ಮಾಡಿಕೊಂಡಿದ್ದಾರೆ.
ಶಾಲಾ ಆರಂಭೋತ್ಸವ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಸುಗಮ ನಿರ್ವಹಣೆಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ವಿವಿಧ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಶಾಲಾ ಕಟ್ಟಡಗಳು, ವಿದ್ಯುತ್ ವ್ಯವಸ್ಥೆ, ಕುಡಿಯುವ ನೀರು ಹಾಗೂ ಆವರಣದ ಸುರಕ್ಷತೆ ಕುರಿತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಹೊಸ ಶೈಕ್ಷಣಿಕ ವರ್ಷದ ಆರಂಭದೊಂದಿಗೆ ದಾಖಲಾತಿ ಆಂದೋಲನಕ್ಕೂ ಚಾಲನೆ ದೊರೆಯಲಿದೆ. ಮಿಂಚಿನ ಸಂಚಾರ ಹಾಗೂ ವಿವಿಧ ಜಾಗೃತಿ ಕಾರ್ಯಕ್ರಮಗಳ ಮೂಲಕ ಸರಕಾರಿ ಶಾಲೆಗಳಲ್ಲಿನ ದಾಖಲಾತಿ ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಅವರನ್ನು ಪುನಃ ಶಿಕ್ಷಣದ ಮುಖ್ಯವಾಹಿನಿಗೆ ಕರೆತರಲು ಶಿಕ್ಷಣ ಇಲಾಖೆ ವಿಶೇಷ ಅಭಿಯಾನ ಹಮ್ಮಿಕೊಂಡಿದೆ.
ಹೊಸ ಶೈಕ್ಷಣಿಕ ವರ್ಷದ ಆರಂಭವನ್ನು ಮಕ್ಕಳಿಗೆ ಸ್ಮರಣೀಯವಾಗಿಸಲು ಹಾಗೂ ಗುಣಮಟ್ಟದ ಶಿಕ್ಷಣ ಒದಗಿಸಲು ಶಿಕ್ಷಣ ಇಲಾಖೆ, ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಮತ್ತು ಸಮುದಾಯ ಒಗ್ಗಟ್ಟಿನಿಂದ ಸಿದ್ಧತೆ ನಡೆಸಿದ್ದು, ಶಾಲಾ ಆವರಣಗಳಲ್ಲಿ ಮತ್ತೆ ಮಕ್ಕಳ ಕಲರವ ಶುರುವಾಗಲಿದೆ.

