ಮಂಗಳೂರು : ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2020ರಲ್ಲಿ ದಾಖಲಾಗಿದ್ದ ಅಪ್ರಾಪ್ತ ವಯಸ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 5 ವರ್ಷ ಜೈಲು, ₹35,000 ದಂಡ ವಿಧಿಸಿದ ಕೋರ್ಟ್ ಆದೇಶ ಹೊರಡಿಸಿದೆ.

ಕಡಬ ತಾಲೂಕಿನ ಕುದ್ಮಾರು ನಿವಾಸಿ ಅಬ್ದುಲ್ಲಾ (64) ಎಂಬಾತನಿಗೆ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾಧಾರಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ಆರೋಪಿ ಅಬ್ದುಲ್ಲಾ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 354(A1), 506 ಹಾಗೂ ಪೋಕ್ಸೋ ಕಾಯ್ದೆಯ ಕಲಂ 8 ರ ಅಡಿಯಲ್ಲಿ (ಅ. ಕ್ರ : 12/2020) ಪ್ರಕರಣ ದಾಖಲಾಗಿತ್ತು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಧೀಶರಾದ ಸುಮಂಗಲ ಚಕಲಬ್ಬಿ ಅವರು, ಆರೋಪಿಯ ಮೇಲಿನ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿ ದೋಷಿ ಎಂದು ಘೋಷಿಸಿದ್ದಾರೆ.

ನ್ಯಾಯಾಲಯವು ಆರೋಪಿಗೆ 5 ವರ್ಷಗಳ ಸಾಧಾರಣ ಕಾರಾಗೃಹ ವಾಸ ಮತ್ತು ₹35,000 ದಂಡ ವಿಧಿಸಿದೆ. ಒಂದು ವೇಳೆ ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 6 ತಿಂಗಳ ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಂದಿನ ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿ ಅವರು ಪ್ರಕರಣದ ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಧಾರಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕರಾದ (Public Prosecutor) ಪುಷ್ಪರಾಜ್ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.