ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಭಾಸ್ಕರ ಹೆಗಡೆ ಅವರು ತಮ್ಮ 33 ವರ್ಷಗಳ ಸುದೀರ್ಘ ಬೋಧನಾ ವೃತ್ತಿಯಿಂದ ನಿವೃತ್ತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಬೋಧಕರು, ವಿದ್ಯಾರ್ಥಿಗಳು ಹಾಗೂ ಹಳೆಯ ವಿದ್ಯಾರ್ಥಿಗಳ ಸಹಯೋಗದಲ್ಲಿ ‘ಭಾಸ್ಕರ ಪರ್ವ– ಮಾಧ್ಯಮ ಗುರುವಿಗೆ ಅಭಿನಂದನೆ’ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವು ಜನವರಿ 31ರ ಶನಿವಾರದಂದು ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಲಿದೆ.
ಸಮಾರಂಭದಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ ಚಂದ್ರ ಎಸ್. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಲಿದ್ದಾರೆ. ಇದೇ ವೇಳೆ ಬೆಂಗಳೂರಿನ ಕ್ಷೇಮವನ ಇದರ ಕಾರ್ಯನಿರ್ವಹಕ ನಿರ್ದೇಶಕಿ ಶ್ರೀಮತಿ ಶ್ರದ್ಧಾ ಅಮಿತ್ ಅವರು ಡಾ. ಭಾಸ್ಕರ ಹೆಗಡೆ ಅವರ ಕುರಿತಾದ ಸಾಕ್ಷ್ಯಚಿತ್ರವನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ ಪಿ. ಅವರು ವಹಿಸಲಿದ್ದು, ಅಭಿನಂದನೆಗೆ ಪಾತ್ರರಾಗಲಿರುವ ಡಾ. ಭಾಸ್ಕರ ಹೆಗಡೆ ಅವರು ಉಪಸ್ಥಿತರಿರುವರು ಎಂದು ಆಯೋಜಕರು ತಿಳಿಸಿದ್ದಾರೆ.

