ಮಂಗಳೂರು: ಎಪ್ರಿಲ್ 2ರಿಂದ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ವಿಜಯನಗರ, ಶಿವಮೊಗ್ಗ,ತುಮಕೂರು, ಮಂಡ್ಯ, ಕೋಲಾರ,ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲಿ ಸಾಧಾರಣ ಮಳೆಯಾಗಲಿದೆ. ಈ ಬಾರಿ ಬಿರು ಬೇಸಿಗೆಯಲ್ಲೂ ಮಳೆಯಾಗುತ್ತಿರುವುದು ಜನರಲ್ಲಿ ಸಂತಸ ತಂದಿದೆ.
ಉಡುಪಿ ದಕ್ಷಿಣಕನ್ನಡ ಮತ್ತು ಉತ್ತರಕನ್ನಡ ಜಿಲ್ಲೆಯಲ್ಲಿ ಎಪ್ರಿಲ್ 1 ರಿಂದ ಮೂರ ವರೆಗೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಏಪ್ರಿಲ್ 1 ರಿಂದ 3 ರವರೆಗೆ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು & ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 40-50 ಕಿಮೀ ತಲುಪುವ ಸಾಧ್ಯತೆಯಿದ್ದು, ಉತ್ತರ ಒಳನಾಡು ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಅಲ್ಲದೆ ದಕ್ಷಿಣ ಒಳನಾಡು & ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ದಿನಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ಈ ನಡುವೆ ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ 02 ಮತ್ತು 03 ಏಪ್ರಿಲ್ ರಂದು ಮತ್ತು ದಕ್ಷಿಣ ಒಳನಾಡಿನಲ್ಲಿ 03 ಏಪ್ರಿಲ್ 2025 ರಂದು ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಎಚ್ಚರಿಸಿದೆ.

