ಬಂಟ್ವಾಳ: ಬರಿಮಾರು ಸಮೀಪದ ಕಲ್ಲೆಟ್ಟಿ ಶ್ರೀ ಕನಲ್ತಾಯ ದೈವಸ್ಥಾನದ ಬಳಿ ಬುಧವಾರ ಸಂಜೆ ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಯುಕೆಜಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಮೃತ ವಿದ್ಯಾರ್ಥಿನಿಯನ್ನು ಕಲ್ಲಡ್ಕದ ಶ್ರೀ ರಾಮ ಶಾಲೆಯ ವಿದ್ಯಾರ್ಥಿನಿ ಪೆರ್ನೆ ನಿವಾಸಿ ಚಂದ್ರಶೇಖರ್ ಅವರ ಪುತ್ರಿ ಚಿರನ್ವಿ (5) ಎಂದು ಗುರುತಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಇತರ ನಾಲ್ಕು ಮಕ್ಕಳು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾಲಾ ಸಮಯದ ನಂತರ ವಿದ್ಯಾರ್ಥಿಗಳನ್ನು ಮನೆಗೆ ಕರೆದೊಯ್ಯುತ್ತಿದ್ದಾಗ ಈ ದುರಂತ ಸಂಭವಿಸಿದೆ. ಬಲವಾದ ಗಾಳಿ ಮತ್ತು ಭಾರೀ ಮಳೆಯಿಂದಾಗಿ ರಸ್ತೆ ಬದಿಯ ಬೃಹತ್ ಮರವು ಇದ್ದಕ್ಕಿದ್ದಂತೆ ಬಸ್ ಮೇಲೆ ಬಿದ್ದು, ಅದರ ಮುಂಭಾಗ ಸಂಪೂರ್ಣವಾಗಿ ಜಖಂ ಆಗಿದೆ.

ಘಟನೆ ಸಂಭವಿಸಿದ ತಕ್ಷಣ, ಸ್ಥಳೀಯರು ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿ, ಮಕ್ಕಳನ್ನು ನಜ್ಜುಗುಜ್ಜಾದ ವಾಹನದಿಂದ ಹೊರತೆಗೆಯಲಾಗಿದೆ. ತೀವ್ರವಾಗಿ ಗಾಯಗೊಂಡ ಚಿರನ್ವಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಬಾಲಕಿ ಕೊನೆಯುಸಿರೆಳೆದಿದ್ದಾಳೆ.

ಗಾಯಗೊಂಡ ವಿದ್ಯಾರ್ಥಿಗಳನ್ನು ಸ್ಥಳೀಯರು ಮತ್ತು ತುರ್ತು ವಾಹನಗಳ ಸಹಾಯದಿಂದ ಪುತ್ತೂರು ಮತ್ತು ತುಂಬೆಯಲ್ಲಿರುವ ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಯಿತು.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಬಿದ್ದ ಮರವನ್ನು ತೆರವುಗೊಳಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

View this post on Instagram

A post shared by News Karnataka (@newskarnataka)