ಕಾರ್ಕಳ: ಬೈಲೂರಿನ ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಪ್ರತಿಮೆಯ ಪುನರ್ ನಿರ್ಮಾಣ ಹಾಗೂ ಥೀಮ್ ಪಾರ್ಕ್ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಬೆಂಗಳೂರಿನ ವಿಕಾಸಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರ ನೇತೃತ್ವದಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿಶೇಷ ಸಭೆ ನಡೆದಿದ್ದು, ಅಭಿವೃದ್ಧಿ ಕಾರ್ಯಗಳ ಅನುಷ್ಠಾನಕ್ಕೆ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ಕಾರ್ಕಳ ಕಾಂಗ್ರೆಸ್ ತಿಳಿಸಿದೆ.
ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ ಮಾರ್ಗದರ್ಶನದಂತೆ ಸರ್ಕಾರ ಈ ನಿರ್ಧಾರಗಳನ್ನು ಕೈಗೊಂಡಿದೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಕಳದ ಅಧ್ಯಕ್ಷ ಶುಭದರಾವ್, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ್ ಭಟ್ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪ್ರತಿಮೆಯ ಪುನರ್ ನಿರ್ಮಾಣಕ್ಕೆ ತಾಂತ್ರಿಕ ಪರಿಣಿತರ ಸಲಹೆ ಪಡೆಯುವುದು, ಥೀಮ್ ಪಾರ್ಕ್ಗೆ ಮೀಸಲಾದ ಗೋಮಾಳ ಜಮೀನನ್ನು ಪಾರ್ಕ್ ಹೆಸರಿಗೆ ವರ್ಗಾಯಿಸಲು ಅಗತ್ಯ ಕ್ರಮ ಕೈಗೊಳ್ಳುವುದು ಹಾಗೂ ಕಾಮಗಾರಿಯನ್ನು ಪಾರದರ್ಶಕವಾಗಿ ನಿರ್ವಹಿಸಲು ಹೊಸ ಟೆಂಡರ್ ಕರೆಯುವುದು ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಉಪಸ್ಥಿತಿಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಈ ಕ್ರಮವನ್ನು ಸ್ವಾಗತಿಸಿರುವ ಕಾರ್ಕಳ ಕಾಂಗ್ರೆಸ್, ಇದಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದೆ. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬೈಲೂರಿನ ಉಮ್ಮಿಕಲ್ ಬೆಟ್ಟದಲ್ಲಿ ನಿರ್ಮಿಸಲಾದ ಪರಶುರಾಮನ ಪ್ರತಿಮೆ ಕುರಿತು ವಿವಾದ ಉಂಟಾಗಿತ್ತು. ಪ್ರತಿಮೆ ಕಂಚಿನದ್ದಲ್ಲ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಶಾಸಕ ವಿ. ಸುನಿಲ್ ಕುಮಾರ್ ವಿರುದ್ಧ ಕಾಂಗ್ರೆಸ್ ನಾಯಕರು ಟೀಕೆ ನಡೆಸಿದರು.
ಪ್ರತಿಮೆ ವಿಚಾರದಲ್ಲಿ ಪ್ರಶ್ನೆ ಎತ್ತಿದ ಹೋರಾಟಗಾರರು ಮತ್ತು ಕಾರ್ಯಕರ್ತರನ್ನು ಅವಮಾನಿಸಿ, ಅಪಹಾಸ್ಯ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇದೀಗ ಪ್ರತಿಮೆ ಪುನರ್ ನಿರ್ಮಾಣ ಮತ್ತು ಪಾರ್ಕ್ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಂಡಿರುವುದರಿಂದ ಕಳೆದ ಮೂರು ವರ್ಷಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ಮತ್ತೊಂದು ಹಂತದ ಜಯ ದೊರೆತಂತಾಗಿದೆ ಎಂದು ಮುಖಂಡರು ಅಭಿಪ್ರಾಯಪಟ್ಟರು.
ವಿಕಾಸಸೌಧದಲ್ಲಿ ಸಭೆ ನಡೆದ ದಿನವೇ ಥೀಮ್ ಪಾರ್ಕ್ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಬೆಂಗಳೂರಿನಿಂದ ಕಾರ್ಕಳಕ್ಕೆ ವಾಹನ ಜಾಥಾ ನಡೆಸುವ ಪೋಸ್ಟರ್ಗಳು ಶಾಸಕರ ಆಪ್ತರ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವೆಬ್ ನ್ಯೂಸ್ಗಳಲ್ಲಿ ಹರಿದಾಡಿವೆ ಎಂದು ಕಾಂಗ್ರೆಸ್ ಮುಖಂಡರು ಆಕ್ಷೇಪಿಸಿದರು.
ಈ ಹಿಂದೆ ಎರಡು ಬಾರಿ ವಾಹನ ಜಾಥಾ ಆಯೋಜನೆಗೆ ಮುಂದಾಗಿದ್ದರೂ ಜನರ ಸ್ಪಂದನೆ ಇಲ್ಲದ ಕಾರಣ ರದ್ದುಗೊಳಿಸಲಾಗಿತ್ತು ಎಂದು ಅವರು ಹೇಳಿದರು. ಈಗ ಸರ್ಕಾರವೇ ಅಭಿವೃದ್ಧಿ ಕಾರ್ಯಗಳಿಗೆ ನಿರ್ಧಾರ ಕೈಗೊಂಡಿರುವ ಸಂದರ್ಭದಲ್ಲಿ ಜಾಥಾ ನಡೆಸುವ ಮೂಲಕ ಮುಂದಿನ ಕಾಮಗಾರಿಗಳನ್ನು ತಮ್ಮ ಹೋರಾಟದ ಫಲವೆಂದು ಬಿಂಬಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದರು.
ಸರ್ಕಾರದ ನಿರ್ಧಾರದಿಂದ ಪ್ರತಿಮೆ ವಿವಾದಕ್ಕೆ ಸಂಬಂಧಿಸಿದ ಆರೋಪ-ಪ್ರತ್ಯಾರೋಪಗಳು ಹಾಗೂ ಸಂಘರ್ಷಗಳಿಗೆ ಅಂತ್ಯವಾಗುವ ನಿರೀಕ್ಷೆಯಿದೆ. ಸರ್ಕಾರದ ಕ್ರಮಕ್ಕೆ ಯಾವುದೇ ಅಡ್ಡಿಪಡಿಸದೆ ಸಹಕರಿಸುವಂತೆ ಶಾಸಕರು ಮತ್ತು ಅವರ ಬೆಂಬಲಿಗರಿಗೆ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ್ ಭಟ್, ಕಾರ್ಕಳ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ, ಕಾರ್ಕಳ ಪುರಸಭೆಯ ಮಾಜಿ ಅಧ್ಯಕ್ಷರಾದ ಸುಬಿತ್ ಕುಮಾರ್ ಎನ್.ಆರ್. ಮತ್ತು ಪ್ರತಿಮಾ ರಾಣೆ, ಮಾಜಿ ಸದಸ್ಯ ವಿವೇಕಾನಂದ ಶೆಣೈ, ಕೆಎಂಎಫ್ ಮಂಗಳೂರು ನಿರ್ದೇಶಕ ಸುಧಾಕರ್ ಶೆಟ್ಟಿ ಉಪಸ್ಥಿತರಿದ್ದರು.

