ಮಂಗಳೂರು : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ, ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯ ಕ್ಕಾಗಿ, ದ.ಕ. ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಆದಾಲತ್ ಆಯೋಜಿಸಲಾಗಿದೆ.

ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಲೋಕ್ ಅದಾಲತ್‌ನಲ್ಲಿ ರಾಜೀ ಸಂಧಾನದ ಮುಖಾಂತರ ಇತ್ಯರ್ಥ ಪಡಿಸಿಕೊಳ್ಳಬಹುದಾದ ಪ್ರಕರಣಗಳ ವಿವರ ಇಂತಿವೆ.

ಮೋಟಾರು ವಾಹನ ಅಪಘಾತ ಪ್ರಕರಣಗಳು, ಚೆಕ್ಕು ಆಮಾನ್ಯ ಹಾಗೂ ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳು, ಕಾರ್ಮಿಕ ಹಾಗೂ ನಷ್ಟ ಪರಿಹಾರ ವಿವಾದ ಗಳಿಗೆ ಸಂಬಂಧಪಟ್ಟ ಪ್ರಕರಣಗಳು,ವಿಚ್ಚೇದನ ಪ್ರಕರಣವನ್ನು ಹೊರತುಪಡಿಸಿ ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಗ್ರಾಹಕರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು,

ಭೂ ಸ್ವಾಧೀನ ಹಾಗೂ ಭೂ ಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧ ಪಟ್ಟ ಪ್ರಕರಣಗಳು, ವೇತನ ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣ ಗಳು, ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಪ್ರಕರಣಗಳು, ಕಾನೂನಿನಾತ್ಮಕವಾಗಿ ರಾಜೀಯಾಗಬಲ್ಲ ಎಲ್ಲಾ ರೀತಿಯ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು.

ಅದರಲ್ಲಿ ನ್ಯಾಯಾಧೀಶರು ಹಾಗೂ ಸಂಬಂಧಪಟ್ಟ ಪ್ರಕರಣಗಳ ವಿವಿಧ ಇಲಾಖೆಗಳ ಅಧಿಕಾರಿಗಳು ಮಧ್ಯಸ್ಥಿಕೆ ವಹಿಸುತ್ತಾರೆ. ಇಬ್ಬರು ಪಕ್ಷಗಾರರು ಪ್ರಕರಣವನ್ನು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗ ದರ್ಶನವನ್ನು ನೀಡಲಾಗುವುದು.

* ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು Nay, ಪೂರ್ಣವಾಗಿ ಮರುಪಾವತಿಸಲಾಗುವುದು ಹಾಗೂ ಆದೇಶದ ವಿರುದ್ಧ ಯಾವುದೇ ಮೇಲ್ಮನವಿ ಇರುವುದಿಲ್ಲ.

* ಕಡಿಮೆ ಖರ್ಚಿನಲ್ಲಿ ತ್ವರಿತ ನ್ಯಾಯ ಪಡೆದುಕೊಂಡು ತಮ್ಮಸಮಯ ಹಾಗೂ ಸಂಬಂಧಗಳನ್ನು ಉಳಿಸಿಕೊಳ್ಳಲು ಇದೊಂದು ವಿಶೇಷ ಅವಕಾಶವಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಶ್ರೀ ಬಸವರಾಜ್ ನ್ಯಾಯಾಧೀಶರು, ಹಿರಿಯ ಸಿವಿಲ್ ನ್ಯಾಯಾದೀಶರು,ಮತ್ತು. ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಮಂಗಳೂರು ದಕ್ಷಿಣ ಕನ್ನಡ,ಜಿಲ್ಲಾ ಶ್ರೀಮತಿ ಜೈಬುನ್ನಿಸ , ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ದಕ್ಷಿಣ ಕನ್ನಡ. ಉಪಸ್ಥಿತಿ.