ಮಂಗಳೂರು : ಆರೋಗ್ಯ ಸಚಿವರಾದ ಶ್ರೀಯುತ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಎಚ್. ಅವರ ನೇತೃತ್ವದ ತಂಡವು ಮುಕ್ಕ, ಸುರತ್ಕಲ್‌ನಲ್ಲಿರುವ ಶ್ರೀನಿವಾಸ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕ್ಯಾಂಟೀನ್ ಹಾಗೂ ಹಾಸ್ಟೆಲ್ ಮೆಸ್‌ನ ಅಡುಗೆ ಕೋಣೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿತು.

ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗಳಲ್ಲಿ ರೋಗಿಗಳು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ವಿತರಿಸಲಾಗುವ ಆಹಾರದ ಗುಣಮಟ್ಟ ಹಾಗೂ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ಪರಿಶೀಲನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಆಹಾರ ತಯಾರಿಕೆಗೆ ಬಳಸಲಾಗುವ ಕಚ್ಚಾ ಸಾಮಗ್ರಿಗಳ ಮಾದರಿಗಳನ್ನು ಸಂಗ್ರಹಿಸಿ, ಗುಣಮಟ್ಟ ಪರೀಕ್ಷೆಗಾಗಿ ಆಹಾರ ಪ್ರಯೋಗಾಲಯಕ್ಕೆ ಕಳುಹಿಸಲಾಯಿತು. ಅಲ್ಲದೆ, ಆಹಾರ ತಯಾರಿಕೆಗೆ ಬಳಸುವ ನೀರಿನ ಮಾದರಿಯನ್ನೂ ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲಾಯಿತು.

ರೋಗಿಗಳಿಗೆ ಹಾಗೂ ಇತರರಿಗೆ ವಿತರಿಸುವ ಆಹಾರವನ್ನು ಉತ್ತಮ ಗುಣಮಟ್ಟದ ಮತ್ತು ಸುರಕ್ಷಿತ ಪದಾರ್ಥಗಳನ್ನು ಬಳಸಿ, ಸ್ವಚ್ಛತೆಯೊಂದಿಗೆ ತಯಾರಿಸಿ ವಿತರಿಸುವಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಆಹಾರ ತಯಾರಿಸುವ ಮತ್ತು ಸರಬರಾಜು ಮಾಡುವ ಸಿಬ್ಬಂದಿಯ ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಿಬ್ಬಂದಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸಿ, ಅದರ ದೃಢೀಕರಣ ಪತ್ರಗಳನ್ನು ಸಲ್ಲಿಸುವಂತೆಯೂ ಸೂಚಿಸಲಾಯಿತು.

ಇದಲ್ಲದೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಹಾಗೂ ಅದರಡಿ ಜಾರಿಯಲ್ಲಿರುವ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಲಾಯಿತು.