ಮಂಗಳೂರು : ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಪ್ಯಾಕೇಜ್ ವ್ಯಾಪ್ತಿಗೆ ಒಳಪಡುವ ಚಿಕಿತ್ಸೆಯನ್ನು ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ನೀಡಬೇಕು. ಈ ಚಿಕಿತ್ಸೆಗಳಿಗಾಗಿ ರೋಗಿಗಳಿಂದ ಹೆಚ್ಚುವರಿ ಹಣ ಪಡೆಯುವಂತಿಲ್ಲದಿದ್ದರೂ ಈ ಬಗ್ಗೆ ಹಲವು ದೂರುಗಳು ಬಂದಿದೆ. ಒಂದು ವೇಳೆ ಫಲಾನುಭವಿಗಳಿಂದ ಹಣ ಪಡೆದಿದ್ದಲ್ಲಿ ಹಿಂದಿರುಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ತಿಳಿಸಿದ್ದಾರೆ.
ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯುಶ್ಮಾನ್ ಯೋಜನೆಗೆ ಸಂಬಂಧಿಸಿ ೨೦ ದಿನಗಳ ಹಿಂದೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆ ನಡೆಸಿ, ಯೋಜನೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.
೨೦೧೮ರಲ್ಲಿ ಅನುಷ್ಠಾನಗೊಂಡ ಆಯುಷ್ಮಾನ್ ಭಾರತ್ ಯೋಜನೆಯಡಿ ಒಂದು ಕುಟುಂಬಕ್ಕೆ ವರ್ಷಕ್ಕೆ ಐದು ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯ ಲಭ್ಯವಿದ್ದು ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ಒದಗಿಸಲು ಪ್ಯಾಕೇಜ್ಗಳನ್ನು ನಿಗದಿಪಡಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಲು ಎಲ್ಲಾ ಆಸ್ಪತ್ರೆಗಳಲ್ಲೂ ಸಾರ್ವಜನಿಕರಿಗೆ ಕಾಣುವಂತೆ ಮಾಹಿತಿ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದರು.

