ಮಂಗಳೂರು : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವಲ್ಲಿ ಕೇಂದ್ರ ಸರಕಾರದ ವೈಫಲ್ಯದಿಂದಾಗಿ ಇಂದು ದೇಶದೆಲ್ಲೆಡೆ ವಿದ್ಯಾರ್ಥಿಗಳು ರಸ್ತೆಗಿಳಿಯುವ ಪರಿಸ್ಥಿತಿ ಬಂದಿದೆ. ಪ್ರತಿಭಟನೆಯ ಸಂದರ್ಭ ಮಕ್ಕಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ ನಡೆಸಿದ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯನ್ನು ನಡೆಸಿಕೊಂಡ ರೀತಿ ಸರ್ವಾಧಿಕಾರಿ ಧೋರಣೆಯನ್ನು ತೋರಿಸಿದೆ. ಪ್ರಜಾಪ್ರಭುತ್ವ ಇನ್ನೂ ಜೀವಂತವಾಗಿದೆಯೇ ಎಂಬ ಸಂಶಯಕ್ಕೆ ಕಾರಣವಾಗಿದೆ. ಇದಕ್ಕೆ ಕೇಂದ್ರ ಸರಕಾರ ಉತ್ತರಿಸಬೇಕಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರಕ್ಕೆ ನಾಚಿಕೆ, ಮಾನ-ಮರ್ಯಾದೆ ಇದ್ದಲ್ಲಿ ಘಟನೆಯ ನೈತಿಕ ಹೊಣೆ ಹೊತ್ತು ಶಿಕ್ಷಣ ಸಚಿವರ ರಾಜೀನಾಮೆ ಪಡೆಯಬೇಕು ಎಂದರು.

ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳನ್ನು ನಡೆಸಿಕೊಂಡ ರೀತಿ ಸಾಮಾಜಿಕ ಜಾಲತಾಣಗಳ ಮೂಲಕ ಜಗತ್ತೇ ಕಂಡಿದೆ. ಪ್ರತಿಭಟನೆಯಲ್ಲಿ ಬಿಜೆಪಿಯ ಗೂಂಡಾಗಳನ್ನು ಬಳಸಿದ್ದು, ಈ ದೃಶ್ಯಗಳು ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭಅಮೃತಸರದಲ್ಲಿ ನಡೆದ ಬ್ರಿಟಿಷರ ಹತ್ಯಾಕಾಂಡದ ಘಟನೆಗಳನ್ನು ನೆನಪಿಸಿವೆ. ಇವುಗಳನ್ನು ನೋಡುವಾಗಲಾದರೂ ಬಿಜೆಪಿಯವರಿಗೆ ಮನುಷ್ಯತ್ವವೇ ಇಲ್ಲ ಎಂಬಂತೆ ಕಾಣುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.