ಮಂಗಳೂರು : ಆರೋಗ್ಯ ಸಚಿವರಾದ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ವತಿಯಿಂದ ಅನಿರೀಕ್ಷಿತ ತಪಾಸಣಾ ಕಾರ್ಯಾಚರಣೆ ನಡೆಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಎಚ್. ಅವರ ನೇತೃತ್ವದಲ್ಲಿ ಐದು ವಿಶೇಷ ತಂಡಗಳನ್ನು ರಚಿಸಿ, ಸುರತ್ಕಲ್ ವ್ಯಾಪ್ತಿಯ ವಿವಿಧ ಹೋಟೆಲ್‌ಗಳು, ವಾಣಿಜ್ಯ ಮಳಿಗೆಗಳು ಹಾಗೂ ಆಹಾರ ತಯಾರಿಕಾ ಘಟಕಗಳ ಮೇಲೆ ದಿಢೀರ್ ದಾಳಿ ನಡೆಸಲಾಯಿತು.

ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಸುರತ್ಕಲ್‌ನ ಸೂರಜ್ ಇಂಟರ್‌ನ್ಯಾಷನಲ್ ಹೋಟೆಲ್, ಮೋರ್ ರಿಟೇಲ್ ಮಳಿಗೆ, ಬ್ಲಿಂಕಿಟ್ ಆನ್‌ಲೈನ್ ಪ್ಲಾಟ್‌ಫಾರ್ಮ್, ಮೆಕ್‌ಡೊನಾಲ್ಡ್ಸ್ ರೆಸ್ಟೋರೆಂಟ್ ಹಾಗೂ ಎನ್‌ಐಟಿಕೆ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳ ಹಾಸ್ಟೆಲ್‌ಗಳಿಗೆ ಆಹಾರ ಪೂರೈಕೆ ಮಾಡುವ ಅಡುಗೆ ಘಟಕಗಳಲ್ಲಿ ಅನಿರೀಕ್ಷಿತ ತಪಾಸಣೆ ನಡೆಸಲಾಯಿತು.

ಆಹಾರ ಪದಾರ್ಥಗಳ ಗುಣಮಟ್ಟ, ಸ್ವಚ್ಛತೆ, ಆಹಾರ ತಯಾರಿಕಾ ಕ್ರಮಗಳು ಹಾಗೂ ಆಹಾರ ಸುರಕ್ಷತಾ ನಿಯಮಗಳ ಪಾಲನೆಯ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದರು. ಸಾರ್ವಜನಿಕರಿಗೆ ಸುರಕ್ಷಿತ, ಸ್ವಚ್ಛ ಹಾಗೂ ಗುಣಮಟ್ಟದ ಆಹಾರ ದೊರೆಯುವಂತೆ ಮಾಡುವ ಉದ್ದೇಶದಿಂದ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.