ಬೆಂಗಳೂರು: ಕೊರೊನಾ ವೈರಸ್ ಸೋಂಕು ಹೆಚ್ಚಿರುವ ಗಡಿ ಜಿಲ್ಲೆಗಳಿಗೆ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲನೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದರು.
ಮೈಸೂರು ಜಿಲ್ಲೆಗೆ ಇಂದು ಭೇಟಿ ನೀಡುತ್ತಿದ್ದೇನೆ. ಅಲ್ಲಿನ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತೇನೆ. ಇದೇ ರೀತಿ ಹೆಚ್ಚು ಸೋಂಕಿರುವ ಗಡಿ ಜಿಲ್ಲೆಗಳಿಗೂ ಶೀಘ್ರದಲ್ಲೇ ಭೇಟಿ ನೀಡಲು ನಿರ್ಧರಿಸಿದ್ದು, ಪರಿಸ್ಥಿತಿ ಪರಿಶೀಲನೆ ನಡೆಸುತ್ತೇನೆ ಎಂದು ತಿಳಿಸಿದರು.
ಮೈಸೂರಿಗೆ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು. ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ನಾಡದೇವತೆಯ ದರ್ಶನ ಪಡೆಯಲು ಆಗಮಿಸಿದ ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಪೂರ್ಣ ಕುಂಭ ಸ್ವಾಗತ ಮಾಡಲಾಯಿತು. ತದನಂತರ ದೇವಿಯ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.
ಸಚಿವರಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಡಾ. ಕೆ. ಸುಧಾಕರ್, ನಾರಾಯಣಗೌಡ, ಮುನಿರತ್ನ, ಗೋಪಾಲಯ್ಯ ಸಾಥ್ ನೀಡಿದ್ದರು.