ಮಂಡ್ಯ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ದೇವೇಗೌಡರ ಕುಟುಂಬದಿಂದ ಕುಮಾರಸ್ವಾಮಿ ಮತ್ತು ರೇವಣ್ಣ ಮಾತ್ರ ಸ್ಪರ್ಧಿಸುವುದಾಗಿ ದೇವೇಗೌಡರ ಪುತ್ರ ಡಾ. ಎಚ್.ಡಿ. ರಮೇಶ್ ಸ್ಪಷ್ಟಪಡಿಸಿದ್ದಾರೆ.
ನಗರದ ಕಾಳಿಕಾಂಭ ದೇವಸ್ಥಾನದ ಬಳಿ ಮಂಡ್ಯ ವಿಧಾನಸಭಾ ವ್ಯಾಪ್ತಿಯಲ್ಲಿ ಬಸರಾಳಿನಿಂದ ಆರಂಭವಾಗುವ ಕುಮಾರಪರ್ವ ಕಾರ್ಯಕ್ರಮದ ಅಂಗವಾಗಿ ನಡೆದ ಬೈಕ್ ರ್ಯಾಲಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ತಿಳಿದಿರುವಂತೆ ಕುಮಾರಸ್ವಾಮಿ ಹಾಗೂ ಎಚ್.ಡಿ. ರೇವಣ್ಣ ಇಬ್ಬರು ಮಾತ್ರ ಚುನಾವಣೆಗೆ ಸ್ಪರ್ಧಿಸುವುದು ಖಚಿತವಾಗಿದೆ. ಉಳಿದಂತೆ ಅನಿತಾ ಕುಮಾರಸ್ವಾಮಿ, ಭವಾನಿ ರೇವಣ್ಣ, ಪ್ರಜ್ವಲ್ ರೇವಣ್ಣ ಸ್ಪರ್ಧೆ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಆಗಿಲ್ಲ. ಅನಿತಾ ಕುಮಾರಸ್ವಾಮಿ ಚನ್ನಪಟ್ಟಣದಿಂದ ಸ್ಪರ್ಧಿಸುತ್ತಾರೆಂಬುದು ಸುಳ್ಳು ಎಂದು ಹೇಳಿದರು.
ಕುಮಾರಪರ್ವ ಯಾತ್ರೆಗೆ ಚಾಲನೆ ನೀಡಲಾಗಿದೆ. ಕಾರ್ಯಕರ್ತರೆಲ್ಲರೂ ಒಗ್ಗೂಡಿ ಕೆಲಸ ಮಾಡಿದಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲಲು ಸಾಧ್ಯ ಎಂದ ಅವರು, ಪಕ್ಷ ಯಾರಿಗೇ ಟಿಕೆಟ್ ಕೊಟ್ಟರೂ ಎಲ್ಲ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಬೇಕು ಎಂದು ಈಗಾಗಲೇ ಸೂಚನೆ ನೀಡಿದ್ದೇನೆ ಎಂದರು.