ನಂಜನಗೂಡು: ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಜಿಂಕೆ ಸಾವನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ನೇರಳೆ ಗೇಟ್ ಬಳಿ ನಡೆದಿದೆ.

ನಂಜನಗೂಡು ಮತ್ತು ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ನೇರಳೆ ಗೇಟ್ ಬಳಿ ಜಿಂಕೆಯೊಂದು ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಜಿಂಕೆಯು ಸ್ಥಳದಲ್ಲಿಯೇ ಮೃತಪಟ್ಟಿದೆ. ಅಪರಿಚಿತ ವಾಹನದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ನೇರಳೆ ಗೇಟ್ ಬಳಿ ಜಿಂಕೆಗಳು ಹೆಚ್ಚಾಗಿ ರಸ್ತೆ ಅಪಘಾತದಿಂದ ಸಾವನ್ನಪ್ಪಿರುವ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಈ ಸ್ಥಳದಲ್ಲಿ ನಾಮಫಲಕ ಮತ್ತು ಸ್ಪೀಡ್ ಬ್ರೇಕರ್ ಅಳವಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ದಾಟುವ ವೇಳೆ ಈ ಘಟನೆ ನಡೆದಿದ್ದು, ಆ ಸ್ಥಳದಲ್ಲಿ ನಾಮಫಲಕ ಅಳವಡಿಸುವಂತೆ ವರದಿ ಸಲ್ಲಿಸುತ್ತೇನೆ ಎಂದು ವಲಯ ಅರಣ್ಯ ಅಧಿಕಾರಿ ನಿತಿನ್ ಕುಮಾರ್ ತಿಳಿಸಿದ್ದಾರೆ.