ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಹೆಸರನ್ನು ಸ್ವಾಗತ ಭಾಷಣದಲ್ಲಿ ಉಲ್ಲೇಖಿಸದ ವಿಚಾರವಾಗಿ ನಡೆದ ಗಲಾಟೆ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಬಿಜೆಪಿ ನಗರಾಧ್ಯಕ್ಷ ಹಾಗೂ ಮಾಜಿ ಶಾಸಕ ಎಲ್. ನಾಗೇಂದ್ರ ಅವರ ಬೆಂಬಲಿಗರು ತನಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತ ರಾಜಚಾರಿ ಡಿ.ಎಲ್. ಗಂಭೀರ ಆರೋಪ ಮಾಡಿದ್ದಾರೆ.

ನವೆಂಬರ್ 6ರಂದು ಮೈಸೂರಿನ ಟೌನ್‌ಹಾಲ್ ಆವರಣದಲ್ಲಿ ಬಿಜೆಪಿ ವತಿಯಿಂದ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಎಂಬ ಘೋಷವಾಕ್ಯದೊಂದಿಗೆ ಬೃಹತ್ ಸಮಾವೇಶ ಹಾಗೂ ಪಾದಯಾತ್ರೆ ಆಯೋಜಿಸಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ಸಮಾವೇಶದಲ್ಲಿ ಸ್ವಾಗತ ಭಾಷಣ ಮಾಡಿದ ಮಾಜಿ ಶಾಸಕ ಎಲ್. ನಾಗೇಂದ್ರ ಅವರು, ಪಕ್ಷದ ಹಲವು ನಾಯಕರ ಹೆಸರುಗಳನ್ನು ಪ್ರಸ್ತಾಪಿಸಿದರೂ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಹೆಸರನ್ನು ಹೇಳಿರಲಿಲ್ಲ. ಈ ವೇಳೆ ಮಾಜಿ ಶಾಸಕ ಪ್ರೀತಂ ಗೌಡ ಅವರು ಪ್ರತಾಪ್ ಸಿಂಹ ಅವರ ಹೆಸರನ್ನು ಹೇಳುವಂತೆ ನಾಗೇಂದ್ರ ಅವರಿಗೆ ಸೂಚಿಸಿದ್ದರು. ಇದೇ ಸಂದರ್ಭದಲ್ಲಿ ವೇದಿಕೆಯ ಮುಂಭಾಗಕ್ಕೆ ಬಂದ ಬಿಜೆಪಿ ಕಾರ್ಯಕರ್ತ ರಾಜಚಾರಿ, ಪ್ರತಾಪ್ ಸಿಂಹ ಅವರ ಹೆಸರನ್ನು ಹೇಳುವಂತೆ ಒತ್ತಾಯಿಸಿ ಗಲಾಟೆ ಮಾಡಿದ್ದರು. ಬಳಿಕ ಪೊಲೀಸರು ಅವರನ್ನು ವೇದಿಕೆಯಿಂದ ಹೊರಗೆ ಕಳುಹಿಸಿದ್ದರು.

ಈ ಘಟನೆ ಬಳಿಕ ಮೈಸೂರು ವಿಮಾನ ನಿಲ್ದಾಣದ ಬಳಿ ನಾಗೇಂದ್ರ ಬೆಂಬಲಿಗರು ತನ್ನನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ ಎಂದು ರಾಜಚಾರಿ ಆರೋಪಿಸಿದ್ದಾರೆ. ಅಲ್ಲದೆ, ಕುಡಿದು ಎರಡು ಸಾವಿರ ರೂಪಾಯಿ ಪಡೆದು ಗಲಾಟೆ ಮಾಡಿದ್ದಾಗಿ ಹೇಳುವ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿತ್ತು.

ಆದರೆ, ಎರಡು ದಿನಗಳ ಬಳಿಕ ವಿಡಿಯೋ ಕುರಿತು ಸ್ಪಷ್ಟನೆ ನೀಡಿರುವ ರಾಜಚಾರಿ, ನಾಲ್ವರು ನಾಗೇಂದ್ರ ಬೆಂಬಲಿಗರು ತನಗೆ ಕೊಲೆ ಬೆದರಿಕೆ ಹಾಕಿ ಬಲವಂತವಾಗಿ ವಿಡಿಯೋ ಮಾಡಿಸಿಕೊಂಡಿದ್ದಾರೆ. ತನಗೆ ಕುಡಿಯುವ ಅಭ್ಯಾಸವೇ ಇಲ್ಲ ಎಂದು ಆರೋಪಿಸಿದ್ದಾರೆ. ಈ ಸಂಬಂಧ ನಾಲ್ವರ ವಿರುದ್ಧ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ಈ ಘಟನೆಯ ಬೆನ್ನಲ್ಲೇ ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯೊಳಗಿನ ರಾಜಕೀಯ ಪೈಪೋಟಿ ಮತ್ತೆ ಮುನ್ನೆಲೆಗೆ ಬಂದಿದೆ. ಮಾಜಿ ಶಾಸಕ ಎಲ್. ನಾಗೇಂದ್ರ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ನಡುವಿನ ರಾಜಕೀಯ ಪೈಪೋಟಿ ಇದೀಗ ಬಹಿರಂಗ ಸ್ವರೂಪ ಪಡೆದುಕೊಳ್ಳುತ್ತಿದೆಯೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ.