ನಂಜನಗೂಡು: ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದಲ್ಲಿ ಮಧ್ಯರಾತ್ರಿ ತನ್ನ ಮೂರು ಮರಿಗಳ ಜೊತೆ ಹುಲಿ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದೆ.
ಗ್ರಾಮದ ಕೆರೆಯ ಬಳಿ ಕಾಣಿಸಿಕೊಂಡಿರುವ ಹೆಣ್ಣು ಹುಲಿ ಘರ್ಜಿಸಿದೆ. ಮಡುವಿನಹಳ್ಳಿ ಗ್ರಾಮದ ಮಾರ್ಗವಾಗಿ ತೆರಳುತ್ತಿದ್ದ ವಾಹನ ಸವಾರರ ಕಣ್ಣಿಗೆ ಬಿದ್ದಿದ್ದು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ವ್ಯಾಘ್ರ ಮತ್ತು ಹುಲಿ ಮರಿಗಳನ್ನು ಸೆರೆ ಹಿಡಿದಿದ್ದಾರೆ.
ಬಳಿಕ ಗ್ರಾಮಸ್ಥರು ಹೆಡಿಯಾಲ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಹುಲಿ ಹೆಜ್ಜೆ ಗುರುತುಗಳನ್ನು ಪತ್ತೆ ಹಚ್ಚಿದ್ದಾರೆ.
ಹುಲಿ ಸೆರೆಗಾಗಿ ಬೋನು ಇಡಲಾಗುತ್ತದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ತಾಯಿ ಹುಲಿ ಮರಿಗಳ ಜೊತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಭಯಭೀತಿಯಲ್ಲಿದ್ದಾರೆ ಈ ಕೂಡಲೇ ಹುಲಿಯನ್ನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.