ಮೈಸೂರು: ಕಳೆದ ವರ್ಷದ ಮೈಸೂರು ದಸರಾ ಸಂದರ್ಭದಲ್ಲಿ ಬಲೂನ್ ಮಾರಾಟ ಮಾಡಲು ಬಂದಿದ್ದ ಕುಟುಂಬದ ಒಂಬತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಅಪರಾಧಿ ಕಾರ್ತಿಕ್ (32) ಎಂಬಾತನಿಗೆ ಮೈಸೂರಿನ ತ್ವರಿತಗತಿ ವಿಶೇಷ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.

ಕಳೆದ ವರ್ಷ ಅಕ್ಟೋಬರ್ 9ರಂದು ಮೈಸೂರು ದಸರಾ ವಸ್ತುಪ್ರದರ್ಶನದ ಸಮೀಪ ಈ ಭೀಕರ ಘಟನೆ ನಡೆದಿತ್ತು. ಗುಲ್ಬರ್ಗಾದಿಂದ ಮೈಸೂರಿಗೆ ಬಲೂನ್ ಮಾರಾಟ ಮಾಡಲು ಬಂದಿದ್ದ ಕುಟುಂಬದ ಬಾಲಕಿ, ಟೆಂಟ್‌ನಲ್ಲಿ ಮಲಗಿದ್ದ ವೇಳೆ ಆರೋಪಿಯು ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ, 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ್ದರು. ಮೈಸೂರಿನ ಸಿದ್ದಲಿಂಗಪುರ ನಿವಾಸಿಯಾಗಿದ್ದ ಕಾರ್ತಿಕ್, ಮೈಸೂರು–ಕೊಳ್ಳೇಗಾಲ ಮಾರ್ಗದ ಬಸ್‌ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಬಂಧನದ ಬಳಿಕ ಮಹಜರು ನಡೆಸುವ ಸಂದರ್ಭದಲ್ಲಿ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಗ, ಸಬ್‌ಇನ್‌ಸ್ಪೆಕ್ಟರ್ ಜೈಕೀರ್ತಿ ಅವರು ಆತನ ಕಾಲಿಗೆ ಗುಂಡು ಹಾರಿಸಿ ನಿಯಂತ್ರಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಕರಣದ ವಿಚಾರಣೆಯನ್ನು ಮೈಸೂರಿನ ಎಫ್‌ಟಿಎಸ್‌ಸಿ-1 ತ್ವರಿತಗತಿ ವಿಶೇಷ ನ್ಯಾಯಾಲಯದಲ್ಲಿ ನಡೆಸಲಾಗಿದ್ದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಕಾರ್ತಿಕ್‌ಗೆ ಗಲ್ಲು ಶಿಕ್ಷೆ ವಿಧಿಸಿದೆ. ಕಳೆದ ವರ್ಷ ದಸರಾ ಸಂದರ್ಭದಲ್ಲಿ ರಾಜ್ಯಾದ್ಯಂತ ತೀವ್ರ ಆಕ್ರೋಶ ಮತ್ತು ಚರ್ಚೆಗೆ ಕಾರಣವಾಗಿದ್ದ ಈ ಪ್ರಕರಣದಲ್ಲಿ ಇದೀಗ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.