ನಂಜನಗೂಡು: ನಂಜನಗೂಡನ್ನು ಗಾಂಜಾ ಹಾಗೂ ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಆ. 27ರಂದು ಬೃಹತ್ ಬೈಕ್ ರ್ಯಾಲಿ ನಡೆಸಲಾಗುವುದು ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಿದ್ದರಾಜು ತಿಳಿಸಿದ್ದಾರೆ.
ನಂಜನಗೂಡಿನಲ್ಲಿ ಮಾತನಾಡಿದ ಅವರು, ಮಾಜಿ ಶಾಸಕರಾದ ಬಿ. ಹರ್ಷವರ್ಧನ್ ಅವರ ನೇತೃತ್ವದಲ್ಲಿ ‘ನಮ್ಮ ನಂಜನಗೂಡು ಗಾಂಜಾ ಮುಕ್ತ, ಸ್ವಚ್ಛ ನಂಜನಗೂಡು’ ಎಂಬ ಘೋಷವಾಕ್ಯದೊಂದಿಗೆ ಜನಜಾಗೃತಿ ಮೂಡಿಸಲಾಗುವುದು ಎಂದರು.
ಇತ್ತೀಚಿನ ದಿನಗಳಲ್ಲಿ ನಂಜನಗೂಡು ನಗರದಲ್ಲಿ ಗಾಂಜಾ ಹಾಗೂ ಡ್ರಗ್ಸ್ ಹಾವಳಿ ಹೆಚ್ಚಾಗಿದ್ದು, ಯುವಕರು ಮಾದಕ ವ್ಯಸನಕ್ಕೆ ಒಳಗಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಶಾಲಾ-ಕಾಲೇಜುಗಳ ಮುಂಭಾಗದಲ್ಲಿಯೂ ಮಾದಕ ವಸ್ತುಗಳ ಹಾವಳಿ ಹೆಚ್ಚಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರ್ಯಾಲಿ ಆಯೋಜಿಸಲಾಗಿದೆ ಎಂದು ಹೇಳಿದರು.
ಇತ್ತೀಚೆಗೆ ನಂಜನಗೂಡಿನ ಹೌಸಿಂಗ್ ಬೋರ್ಡ್ ಪ್ರದೇಶದಲ್ಲಿ ಯುವಕರು ಗಾಂಜಾ ಸೇವಿಸಿ ಗಲಾಟೆ ನಡೆಸಿದ ಘಟನೆ ನಡೆದಿದ್ದು, ಇಂತಹ ಪ್ರಕರಣಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ನಂಜನಗೂಡಿನಲ್ಲಿ ಮಾದಕ ವಸ್ತುಗಳ ಹಾವಳಿ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದು ಸಿದ್ದರಾಜು ಒತ್ತಾಯಿಸಿದರು.
ನಂಜನಗೂಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದರಿಂದಲೇ ಇಂತಹ ಚಟುವಟಿಕೆಗಳಿಗೆ ಅವಕಾಶ ಸಿಗುತ್ತಿದೆ. ಮಾದಕ ವಸ್ತುಗಳ ಹಾವಳಿ ತಡೆಗಟ್ಟುವಲ್ಲಿ ತಾಲ್ಲೂಕು ಆಡಳಿತ ವಿಫಲವಾಗಿದೆ ಎಂದು ಆರೋಪಿಸಿದರು.
ಆ.27ರಂದು ಚಿಂತಾಮಣಿ ಗಣಪತಿ ದೇವಾಲಯದಿಂದ ಬೈಕ್ ರ್ಯಾಲಿ ಆರಂಭವಾಗಲಿದ್ದು, ನಂಜನಗೂಡಿನ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜನರಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತದೆ. ಬಳಿಕ ತಾಲ್ಲೂಕು ಕಚೇರಿಗೆ ತೆರಳಿ ಮಾದಕ ವಸ್ತುಗಳ ಹಾವಳಿ ತಡೆಗಟ್ಟುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಗುವುದು. ಸುಮಾರು 150ಕ್ಕೂ ಹೆಚ್ಚು ಬೈಕ್ಗಳು ರ್ಯಾಲಿಯಲ್ಲಿ ಭಾಗವಹಿಸಲಿದ್ದು, ಯುವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.

