ನಂಜನಗೂಡು: ಕಾಲೇಜಿಗೆ ಪ್ರವೇಶಿಸಲು ರಸ್ತೆ ಬದಿಯಲ್ಲಿ ನಿಂತಿದ್ದ ಪಾಲಿಟೆಕ್ನಿಕ್ ವಿದ್ಯಾರ್ಥಿಯೊಬ್ಬನ ಮೇಲೆ ವೇಗವಾಗಿ ಬಂದ ಕಾರು ಹರಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ಮೃತರನ್ನು ನಂಜನಗೂಡಿನ ಜೆಎಸ್‌ಎಸ್ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ಪ್ರಿತೇಶ್ ಜೈನ್ (19) ಎಂದು ಗುರುತಿಸಲಾಗಿದೆ. ಕೋರ್ಸ್ ಪೂರ್ಣಗೊಳಿಸಿದ್ದ ಪ್ರಿತೇಶ್ ಜೈನ್, ಉದ್ಯೋಗಕ್ಕಾಗಿ ಸಂದರ್ಶನ ಎದುರಿಸಿ ಕೆಲಸಕ್ಕೆ ಆಯ್ಕೆಯಾಗಿದ್ದರು. ನೇಮಕಾತಿ ಪ್ರಮಾಣಪತ್ರ ಪಡೆಯಲು ಕಾಲೇಜಿಗೆ ತೆರಳುವ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದಾಗ, ರಭಸವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಪ್ರಿತೇಶ್ ಜೈನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಕಾರನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಬೆಂಗಳೂರು ನೋಂದಣಿ ಹೊಂದಿರುವ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಜೆಎಸ್‌ಎಸ್ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು, ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಅಲ್ಲದೆ, ಕಾಲೇಜು ಮುಂಭಾಗದಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗಾಗಿ ರಸ್ತೆ ಸಂಚಾರ ನಿಯಮಗಳ ಫಲಕ, ವೇಗ ನಿಯಂತ್ರಣ ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಘಟನೆ ಸಂಬಂಧ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ಕಾರು ಚಾಲಕನಿಗಾಗಿ ಶೋಧ ನಡೆಸುತ್ತಿದ್ದಾರೆ.

View this post on Instagram

A post shared by News Karnataka (@newskarnataka)