ನಂಜನಗೂಡು: ಕಾವೇರಿ ನೀರು ನಿಯಂತ್ರಣ ಸಮಿತಿ – CWRC ತಮಿಳುನಾಡಿಗೆ 15 ದಿನಗಳ ಕಾಲ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶಿಸಿರುವುದನ್ನು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತೀವ್ರವಾಗಿ ಖಂಡಿಸುತ್ತದೆ ಎಂದು ರಾಜ್ಯ ಕಾರ್ಯಾಧ್ಯಕ್ಷ ವಿದ್ಯಾಸಾಗರ್ ಹೇಳಿದರು.

ನಂಜನಗೂಡಿನಲ್ಲಿ ಈ ಬಗ್ಗೆ ಮಾತನಾಡಿದ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಟಿ.ಆರ್. ವಿದ್ಯಾಸಾಗರ್, CWRCಯ ಈ ಆದೇಶದಿಂದಾಗಿ ರಾಜ್ಯದಲ್ಲಿ ಈಗಾಗಲೇ ನೀರಿನ ಕೊರತೆ ಇರುವ ಸಂದರ್ಭದಲ್ಲಿ ರೈತರು ಮತ್ತು ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣವಾಗಲಿದೆ.

ನೀರಾವರಿ ಇಲಾಖೆ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರ ಕಾವೇರಿ ನೀರು ನಿಯಂತ್ರಣ ಸಮಿತಿಯ ಮುಂದೆ ಕರ್ನಾಟಕದ ನೀರಿನ ವಾಸ್ತವ ಸ್ಥಿತಿಯನ್ನು ಮಂಡಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಬರ ಬಂದಾಗ ನೀರು ನಿರ್ವಹಣೆ ಮಾಡುವ ಸೂತ್ರಗಳ ಬಗ್ಗೆಯೂ ಕನಿಷ್ಠ ಅರಿವಿಲ್ಲದ ಅಧಿಕಾರಿಗಳು, ಕರ್ನಾಟಕದಲ್ಲಿ ಮಳೆಯ ಪ್ರಮಾಣ, ಜಲಾಶಯಗಳಲ್ಲಿನ ನೀರಿನ ಮಟ್ಟ, ರೈತರ ಪರಿಸ್ಥಿತಿಯನ್ನು ಸರಿಯಾಗಿ ವಿವರಿಸಿಲ್ಲ ಎಂದು ದೂರಿದರು.

ಈಗಲೂ ತಡವಾಗಿಲ್ಲ. ಕೂಡಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ – CWMAಗೆ ಅರ್ಜಿ ಸಲ್ಲಿಸಿ, ಕರ್ನಾಟಕದ ಜನರಿಗೆ ಕುಡಿಯುವುದಕ್ಕಾದರೂ ನೀರನ್ನು ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

CWRC ಆದೇಶವನ್ನು ಹಿಂಪಡೆಯದಿದ್ದಲ್ಲಿ ರೈತರು ಬೃಹತ್ ಪ್ರತಿಭಟನೆಗೆ ಇಳಿಯುವುದಾಗಿ ಎಚ್ಚರಿಸಿದರು. ಈ ಸಂದರ್ಭದಲ್ಲಿ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ದೊಡ್ಡೇಗೌಡ, ಕಂದೇಗಾಲ ರಮೇಶ, ಶಿವಕುಮಾರ್ ಸೇರಿದಂತೆ ಸಂಘದ ಪ್ರಮುಖರು ಉಪಸ್ಥಿತರಿದ್ದರು.