ನಂಜನಗೂಡು: ನಗರದ ಚಾಮಲಾಪುರ ಬೀದಿಯಲ್ಲಿ ಆಟೋ ರಾಜ ಶಂಕರ್ ನಾಗ್ ಅಭಿಮಾನಿಗಳ ಬಳಗದ ವತಿಯಿಂದ ನಟ ಶಂಕರ್ ನಾಗ್ ಅವರ ಹುಟ್ಟುಹಬ್ಬ ಹಾಗೂ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಬಿಜೆಪಿ ನಗರ ಅಧ್ಯಕ್ಷ ಎಸ್. ಸಿದ್ದರಾಜು ಅವರು ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ಕನ್ನಡಾಂಬೆ, ಕನ್ನಡ ನಾಡಿನ ಕವಿಗಳ ಹಾಗೂ ನಟ ಶಂಕರ್ ನಾಗ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು.
ನಂತರ ಮಾತನಾಡಿದ ಎಸ್. ಸಿದ್ದರಾಜು ಅವರು, ಕನ್ನಡ ಭಾಷೆ ನಮ್ಮ ನಾಡಿನ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತವಾಗಿದೆ. ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ನಟ ಶಂಕರ್ ನಾಗ್ ಅವರು ಕೇವಲ ನಟರಾಗಿರದೆ, ಕನ್ನಡ ಚಿತ್ರರಂಗಕ್ಕೆ ಹೊಸ ಆಯಾಮ ನೀಡಿದ ಮಹಾನ್ ಕಲಾವಿದರಾಗಿದ್ದರು. ತಮ್ಮ ವಿಶಿಷ್ಟ ಅಭಿನಯ, ನಿರ್ದೇಶನ ಹಾಗೂ ಸಮಾಜಮುಖಿ ಚಿಂತನೆಗಳ ಮೂಲಕ ಜನಮಾನಸದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದಾರೆ. ಅವರ ಆದರ್ಶಗಳು ಯುವಜನತೆಗೆ ಸದಾ ಪ್ರೇರಣೆಯಾಗಿವೆ ಎಂದು ತಿಳಿಸಿದರು.
ಇನ್ನೂ ಶಂಕರ್ ನಾಗ್ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಅಭಿಮಾನಿಗಳು ಅನ್ನದಾನದ ವ್ಯವಸ್ಥೆಯನ್ನು ಏರ್ಪಡಿಸಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಅಧ್ಯಕ್ಷ ಸಿದ್ದರಾಜು, ಬಿಜೆಪಿ ಪ್ರಧಾನ ಕಾರ್ಯದರ್ಶಿ ದೇವನೂರು ರವಿ, ಬಿಜೆಪಿ ಮುಖಂಡರಾದ ಶಂಕರಪ್ಪ, ಮಧುರಾಜ್, ಆಟೋ ಚಾಲಕರ ಸಂಘದ ಅಧ್ಯಕ್ಷ ಕುಮಾರ್, ಉಪಾಧ್ಯಕ್ಷ ಸೋಮ, ಕುಮಾರ್, ಸುನೀಲ್, ನಂದೀಶ್, ರವಿ, ರಾಘು, ಮಾದೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

