ಚಾಮರಾಜನಗರ: ಕೊಳ್ಳೇಗಾಲ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದರಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಿನಕಹಳ್ಳಿ ರಾಚಯ್ಯ ಸೋಮವಾರ ಸಾವಿರಾರು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು. ಕೊಳ್ಳೇಗಾಲದಲ್ಲಿ ತನ್ನದೇ ಆದ ವರ್ಚಸ್ಸು ಹೊಂದಿರುವ ರಾಚಯ್ಯ ಬಂಡಾಯ ಎದ್ದಿರುವುದು ಬಿಜೆಪಿಗೆ ಬಿಸಿ ತುಪ್ಪವಾಗಲಿದೆ.
ಉಳಿದಂತೆ ಚಾಮರಾಜನಗರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪುಟ್ಟರಂಗಶೆಟ್ಟಿ ಶೆಟ್ಟಿ ಚಾಮರಾಜೇಶ್ವರ, ಗಣಪತಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಸಾವಿರಾರು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು.
ಕೊಳ್ಳೇಗಾಲದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸಿದ್ದಾರೆ. ಗುಂಡ್ಲುಪೇಟೆಯ ಹಾಲಿ ಶಾಸಕ ಸಿ.ಎಸ್.ನಿರಂಜನಕುಮಾರ್ ಕೂಡ ನಾಮಪತ್ರ ಸಲ್ಲಿಸಿದರು.
ಹನೂರಿನಲ್ಲಿ ಹಾಲಿ ಕಾಂಗ್ರೆಸ್ ಶಾಸಕ ನರೇಂದ್ರ ಪುತ್ರ ನವನೀತ್ ಗೌಡ ಪಕ್ಷೇತರನಾಗಿ ನಾಮಪತ್ರ ಸಲ್ಲಿಸಿದ್ದಾರೆ. ಜೊತೆಗೆ, ಬಿಜೆಪಿ ಹುರಿಯಾಳು ಪ್ರೀತನ್ ಗೌಡ, ಜೆಡಿಎಸ್ ಅಭ್ಯರ್ಥಿ ಮಂಜುನಾಥ್ ಕೂಡ ನಾಮಪತ್ರ ಸಲ್ಲಿಸಿದ್ದು ಹನೂರಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.