ನಂಜನಗೂಡು: ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕಳೆದ ಒಂದು ತಿಂಗಳಿಂದ ಕುಡಿಯುವ ನೀರಿನ ತೀವ್ರ ಸಮಸ್ಯೆ ಕಾಡುತ್ತಿದೆ. ಮೂಲ ಸೌಕರ್ಯ ಕಲ್ಪಿಸದ ಗ್ರಾಮ ಪಂಚಾಯಿತಿ ವಿರುದ್ಧ ಆಕ್ರೋಶಗೊಂಡ ಶಾಲಾ ಮಕ್ಕಳು ತಟ್ಟೆ ಹಿಡಿದು ದೇವನೂರು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಬೆಳಗಿನಿಂದಲೇ ಬಾಯಾರಿಕೆಯಿಂದ ಪರದಾಡುತ್ತಿದ್ದ ಪುಟಾಣಿ ಮಕ್ಕಳು, “ನಮಗೆ ಕುಡಿಯುವ ನೀರು ಕೊಡಿ” ಎಂದು ತಟ್ಟೆ ಹಿಡಿದು ಗ್ರಾಮ ಪಂಚಾಯಿತಿ ಕಛೇರಿಯ ಮುಂದೆ ಪ್ರತಿಭಟಿಸಿದರು. ಮಧ್ಯಾಹ್ನದ ಬಿಸಿಯೂಟ ಸೇವಿಸಿ ತಟ್ಟೆ ತೊಳೆಯಲು ಮತ್ತು ಕುಡಿಯಲು ನೀರಿಲ್ಲದೆ ಪರದಾಡಿದರು.
ಆದರೆ, ಗಂಟೆ 12 ಆದರೂ ಗ್ರಾಮ ಪಂಚಾಯಿತಿ ಬಾಗಿಲು ತೆರೆಯಲಿಲ್ಲ. ಅಧಿಕಾರಿಗಳು, ಸಿಬ್ಬಂದಿ ಯಾರೂ ಸ್ಥಳಕ್ಕೆ ಬಾರದ ಹಿನ್ನೆಲೆ ಮಕ್ಕಳ ಆಕ್ರೋಶ ಇನ್ನಷ್ಟು ಹೆಚ್ಚಾಯಿತು. ಕುಡಿಯುವ ನೀರು ಸರಬರಾಜು ಮಾಡುವಂತೆ ಶಾಲಾ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದರೂ ಪಂಚಾಯಿತಿ ಕ್ಯಾರೇ ಎನ್ನಲಿಲ್ಲ ಎಂದು ಸ್ಥಳೀಯರು ದೂರಿದರು.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಉಪಾಧ್ಯಕ್ಷ ನಾಗೇಂದ್ರ ಅವರು ಆಕ್ರೋಶ ವ್ಯಕ್ತಪಡಿಸಿದರು. “ಬಾಯಾರಿಕೆಯಿಂದ ಸಾಯುತ್ತಿರುವ ಮಕ್ಕಳ ಮನವಿಗೂ ಸ್ಪಂದಿಸದ ಪಂಚಾಯಿತಿ ಅಧಿಕಾರಿಗಳು ನಾಚಿಕೆಪಡಬೇಕು. ಇದು ಮಕ್ಕಳ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಕಿಡಿಕಾರಿದರು. ಗಂಟೆ 12 ಆದರೂ ಗ್ರಾಮ ಪಂಚಾಯಿತಿಯ ಬಾಗಿಲು ತೆರೆದಿಲ್ಲ.
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಳಿಗ್ಗೆ 10 ಗಂಟೆಯೊಳಗೆ ಅಧಿಕಾರಿಗಳು ಕಛೇರಿಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ ಆದರೂ ಅವರ ಆದೇಶಕ್ಕೂ ಕಿಮ್ಮತ್ತಿಲ್ಲ. ಕೂಡಲೇ ನೀರಿನ ವ್ಯವಸ್ಥೆ ಮಾಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದರು. ದೇವನೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ನೂರಾರು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಶಾಲೆಯ ನಲ್ಲಿಗಳಲ್ಲಿ ಒಂದೇ ಒಂದು ಹನಿ ನೀರು ಬರುತ್ತಿಲ್ಲ. ಮಕ್ಕಳು ಮನೆಯಿಂದ ನೀರಿನ ಬಾಟಲ್ ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬಿಸಿಯೂಟಕ್ಕೂ ನೀರಿಲ್ಲದೆ ಪರದಾಡುವಂತಾಗಿದೆ. ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತ ಕೂಡಲೇ ಮಧ್ಯಪ್ರವೇಶಿಸಿ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಪಾಲಕರು ಒತ್ತಾಯಿಸಿದ್ದಾರೆ.

