ನಂಜನಗೂಡು: ನಗರದ ಚಾಮಲಾಪುರ ಹುಂಡಿ ಗ್ರಾಮದಲ್ಲಿ 20 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಅಂಗನವಾಡಿ ಕಟ್ಟಡವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಉದ್ಘಾಟಿಸಿದರು. ಇದೇ ವೇಳೆ ನಂಜನಗೂಡು ನಗರಸಭೆ ನಿಧಿಯಿಂದ ವಿವಿಧ ವಾರ್ಡ್‌ಗಳಲ್ಲಿ ಕೈಗೆತ್ತಿಕೊಂಡಿರುವ ಸುಮಾರು 45 ಲಕ್ಷ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.

ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಪೂರ್ವಪ್ರಾಥಮಿಕ ಶಿಕ್ಷಣ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಅಂಗನವಾಡಿ ಕಟ್ಟಡವನ್ನು ನಿರ್ಮಿಸಲಾಗಿದೆ. ಮಕ್ಕಳಿಗೆ ಉತ್ತಮ ವಾತಾವರಣದಲ್ಲಿ ಕಲಿಯಲು ಅನುಕೂಲವಾಗುವಂತೆ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.

ನಂಜನಗೂಡು ನಗರಸಭೆ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಜನರ ಅಗತ್ಯಗಳಿಗೆ ಅನುಗುಣವಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿಯೂ ನಗರಸಭೆ ನಿಧಿಯಿಂದ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ನಂಜನಗೂಡು ನಗರಸಭೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 31ರ ಕೊರೆಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಳಾಂಗಣ ಅಭಿವೃದ್ಧಿಗಾಗಿ 10 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗೆ ಶಾಸಕರು ಶಂಕುಸ್ಥಾಪನೆ ನೆರವೇರಿಸಿದರು. ಶಾಲೆಯ ಮೂಲಸೌಕರ್ಯ ಸುಧಾರಣೆ ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.

ಅದೇ ರೀತಿ, ನಗರಸಭೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 8ರಲ್ಲಿ ಇಂದಿರಾ ಕ್ಯಾಂಟೀನ್ ಸಮೀಪ 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಲಾಯಿತು. ಈ ಘಟಕದಿಂದ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಲಭ್ಯವಾಗಲಿದ್ದು, ಸ್ಥಳೀಯ ನಿವಾಸಿಗಳಿಗೆ ಅನುಕೂಲವಾಗಲಿದೆ.

ಇದರೊಂದಿಗೆ ದೇವಿರಮ್ಮನಹಳ್ಳಿ ಬಡಾವಣೆಯ ಜುಬಿಲೆಟ್ ಲೇಔಟ್‌ನ ಉದ್ಯಾನವನದ ಸಮೀಪ 5 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಮತ್ತೊಂದು ಶುದ್ಧ ಕುಡಿಯುವ ನೀರಿನ ಘಟಕವನ್ನೂ ಉದ್ಘಾಟಿಸಲಾಯಿತು. ಇದರಿಂದ ಬಡಾವಣೆಯ ನಿವಾಸಿಗಳು ಹಾಗೂ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ.

ಅಂಗನವಾಡಿ ಕಟ್ಟಡ, ಶಾಲೆಯ ಒಳಾಂಗಣ ಅಭಿವೃದ್ಧಿ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣದಂತಹ ಕಾಮಗಾರಿಗಳ ಮೂಲಕ ಜನರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ನಗರಸಭೆ ಮುಂದಾಗಿದೆ. ಶಿಕ್ಷಣ, ಕುಡಿಯುವ ನೀರು ಸೇರಿದಂತೆ ಸಾರ್ವಜನಿಕರ ದೈನಂದಿನ ಅಗತ್ಯಗಳಿಗೆ ಸಂಬಂಧಿಸಿದ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಮೂಲಕ ನಗರಸಭೆ ವ್ಯಾಪ್ತಿಯ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಒಂದೇ ದಿನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ನಂಜನಗೂಡು ನಗರಸಭೆ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡಲಾಗಿದೆ.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಗರಸಭಾ ಆಯುಕ್ತ ಬಸವರಾಜು, ಮಾಜಿ ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿಎಂ ಶಂಕರ್, ಮಾಜಿ ನಗರಸಭಾ ಸದಸ್ಯರಾದ ಗಾಯತ್ರಿ ಮೋಹನ್, ಸಿದ್ದರಾಜು, ಶಂಕರಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭವ್ಯಶ್ರೀ, ಇಂಜಿನಿಯರ್ ಮಹೇಶ್ ಕುಮಾರ್, ಶ್ರೀಧರ್ ಸೇರಿದಂತೆ ಹಲವರು ಭಾಗವಹಿಸಿದ್ದರು.