ನಂಜನಗೂಡು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಗುರುವಾರ ನಂಜನಗೂಡು ತಾಲ್ಲೂಕಿನ ವಿವಿಧ ಭಾಗಗಳಿಗೆ ಭೇಟಿ ನೀಡಿ ಬರ ವೀಕ್ಷಣೆ ನಡೆಸಿದರು.

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮಕ್ಕೆ ಭೇಟಿ ನೀಡಿದ ಸಚಿವರು, ಮೈಸೂರು ಜಿಲ್ಲೆಯಲ್ಲಿ ಮಳೆ ಕೊರತೆ ಉಂಟಾಗಿದ್ದು, ರೈತರು ಬೆಳೆದ ಬೆಳೆಗಳು ಮಳೆಯಿಲ್ಲದೆ ಒಣಗುತ್ತಿವೆ. ಹೆಚ್ಚಿನ ಪ್ರಮಾಣದಲ್ಲಿ ಬೆಳೆ ನಷ್ಟ ಉಂಟಾಗಿದೆ ಎಂದು ವೀಕ್ಷಣೆ ಮಾಡಿದರು.

ಬಳಿಕ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಇಂದು ನಂಜನಗೂಡು ತಾಲ್ಲೂಕು, ನಾಳೆ ಹುಣಸೂರು ತಾಲೂಕಿಗೆ ಭೇಟಿ ನೀಡಿ ಬರ ವೀಕ್ಷಣೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ಗ್ರಾಮದಲ್ಲಿ ಕುಡಿಯುವ ನೀರಿನ ಬಳಕೆಗಾಗಿ 12 ಕೊಳವೆ ಬಾವಿಗಳನ್ನು ಕೊರೆಸಲಾಗಿದ್ದು, ಅದರಲ್ಲಿ 3 ರಲ್ಲಿ ಮಾತ್ರ ನೀರು ಬರುತ್ತಿದೆ. ಗ್ರಾಮಸ್ಥರ ಕೋರಿಕೆಯ ಮೇರೆಗೆ ಕೆರೆಯ ಬಳಿ ಮತ್ತೊಂದು ಕೊಳವೆ ಬಾವಿ ಕೊರೆಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್‌ಗೆ ಸೂಚನೆ ನೀಡಿದರು. ಅದರಲ್ಲೂ ನೀರು ಬರದಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಾಜ್ಯಾದ್ಯಂತ ಜಿಲ್ಲೆಗಳ ಬರ ಅಧ್ಯಯನಕ್ಕೆ ನೇಮಿಸಿರುವ ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಿಗೆ ಭೇಟಿ ನೀಡುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ. ಅದರಂತೆ ಬರ ವೀಕ್ಷಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಕಬಿನಿ ಜಲಾಶಯ ತುಂಬಿದ್ದು, ಸುತ್ತಮುತ್ತಲಿನ ಗ್ರಾಮಗಳ ಕೆರೆ-ಕಟ್ಟೆಗಳನ್ನು ತುಂಬಿಸಲು ಕ್ರಮಕೈಗೊಳ್ಳಬೇಕು. ಇದರಿಂದ ಅಂತರ್ಜಲ ಮಟ್ಟ ಹೆಚ್ಚಾಗುತ್ತದೆ ಮತ್ತು ದನ-ಕರುಗಳಿಗೆ ನೀರು ದೊರೆಯುತ್ತದೆ. ನಾಲೆಗಳಲ್ಲಿ ಹೂಳು ತುಂಬಿದ್ದು, ಹೂಳು ತೆಗಿಸಬೇಕು. ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ರೈತರು ಮತ್ತು ಗ್ರಾಮಸ್ಥರು ಸಚಿವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಎಸ್. ಬಾಲದಂಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.