ನಂಜನಗೂಡು: ಪ್ರಾಣ ಹೋದರು ನಮ್ಮ ಭೂಮಿಯನ್ನು ಬಿಡುವುದಿಲ್ಲ ಎಂದು ಸಾಬರಹುಂಡಿ ಗ್ರಾಮಸ್ಥರು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು.
ನಂಜನಗೂಡು ತಾಲ್ಲೂಕಿನ ಇಮ್ಮಾವು ಗ್ರಾಮದ ಸಾಬರಹುಂಡಿ ಗ್ರಾಮದಲ್ಲಿ ಗ್ರಾಮಸ್ಥರು ದಲಿತ ಸಂಘರ್ಷ ಸಮಿತಿ ಬಣರಹಿತ ಜಿಲ್ಲಾ ಸಂಘಟನಾ ಸಂಚಾಲಕ ಆಲತ್ತೂರು ಶಿವರಾಜು ಮತ್ತು ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ ಸಂಘಟನೆಯ ರಾಜ್ಯ ಉಪಾಧ್ಯಕ್ಷ ನವೀದ್ ಪಾಷಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮುಸ್ಲಿಂ ಸಮುದಾಯದ ನಿವಾಸಿಗಳು ನಾಲ್ಕು ತಲೆಮಾರುಗಳಿಂದ ವಾಸ ಮಾಡುತ್ತಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣ ಮಾಡಲು ಸರ್ಕಾರ ಮುಂದಾಗಿದ್ದು, ಈಗಾಗಲೇ ಕಾಮಗಾರಿಯನ್ನು ನಡೆಸಲಾಗುತ್ತಿದೆ. ಸಾಬರಹುಂಡಿ ಗ್ರಾಮಸ್ಥರನ್ನು ಹೊರಹಾಕಲು ಕೆಐಎಡಿಬಿ ಅಧಿಕಾರಿಗಳು ಪ್ರಯತ್ನ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿ ಪ್ರತಿಭಟನೆಗೆ ಇಳಿದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯರವರು ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರಿರುವ ಈ ಸ್ಥಳದಲ್ಲಿ ನಾವು ನಮ್ಮ ತಾತ ಮುತ್ತಾತನ ಕಾಲದಿಂದಲೂ ಹತ್ತಕ್ಕೂ ಹೆಚ್ಚು ಕುಟುಂಬಗಳು ವಾಸ ಮಾಡುತ್ತಿದ್ದೇವೆ. ಸುಮಾರು 53 ಎಕರೆ ಪ್ರದೇಶದಲ್ಲಿ ನಾವು ಉಳುಮೆ ಮಾಡಿಕೊಂಡು ಜೀವನ ಸಾಗಿಸುತ್ತೇವೆ.
ಎಲ್ಲಾ ದಾಖಲಾತಿಗಳು ನಮ್ಮಲ್ಲಿ ಇವೆ. ನಾವು ಯಾವುದೇ ಕಾರಣಕ್ಕೂ ನಮ್ಮ ಭೂಮಿಯನ್ನು ಬಿಟ್ಟು ಹೋಗುವುದಿಲ್ಲ. ನಮಗೆ ಪರಿಹಾರ ಮತ್ತು ಸ್ಥಳಾಂತರ ಮಾಡುವುದು ನಮಗೆ ಬೇಡವೇ ಬೇಡ. ಪ್ರಾಣ ಹೋದರು ನಾವು ನಮ್ಮ ಭೂಮಿಯನ್ನು ಬಿಡುವುದಿಲ್ಲ. ನಾವು ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾದರೆ ಸರ್ಕಾರವೇ ನೇರ ಹೊಣೆಯಾಗುತ್ತದೆ ಎಂದು ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ.
ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ರವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಆಲತ್ತೂರು ಶಿವರಾಜು, ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ ಸಂಘಟನೆಯ ರಾಜ್ಯ ಉಪಾಧ್ಯಕ್ಷ ನವೀದ್ ಪಾಷಾ, ಬಿಬಿ ಆಯಿಷಾ, ಮೋಸಿನ್, ಗುಲಾಬ್ ಜಾನ್, ಅಬ್ಬಾಸ್, ಚಾನ್ ಪಾಷಾ ಸೇರಿದಂತೆ ನಿವಾಸಿಗಳು ಹಾಜರಿದ್ದರು.

