ನಂಜನಗೂಡು: ಜಮೀನಿನಲ್ಲಿ ಬೆಳೆ ಕಾವಲು ಕಾಯ್ದು ಬೆಳಗಿನ ಜಾವ ಮನೆಗೆ ಮರಳುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಕುಮಾರ್ (56) ಮೃತಪಟ್ಟ ರೈತ. ಮಂಗಳವಾರ ಬೆಳಗ್ಗೆ ಸುಮಾರು 5:30ರ ವೇಳೆಗೆ ಗ್ರಾಮದ ಮುಂಭಾಗದಲ್ಲೇ ಕಾಡಾನೆ ದಾಳಿ ನಡೆಸಿದೆ ಎನ್ನಲಾಗಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಓಂಕಾರ ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಕಳೆದ ಒಂದು ತಿಂಗಳಿನಿಂದ ಗ್ರಾಮದ ಸುತ್ತಮುತ್ತ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆನೆಗಳ ಚಲನವಲನದ ಮೇಲೆ ನಿಗಾ ವಹಿಸಲು ಅಗತ್ಯ ಸಿಬ್ಬಂದಿಯನ್ನು ನೇಮಿಸಿಲ್ಲ. ಅರಣ್ಯ ಅಧಿಕಾರಿಗಳು ರೈತರ ಸುರಕ್ಷತೆಗೆ ಆದ್ಯತೆ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಸ್ಥಳಕ್ಕೆ ಭೇಟಿ ನೀಡಿ ಮೃತ ರೈತನ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು. ದುಃಖತಪ್ತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಕಾಡಾನೆಯನ್ನು ಶೀಘ್ರವಾಗಿ ಸೆರೆಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅರಣ್ಯ ಸಚಿವರನ್ನು ಮೃತರ ಕುಟುಂಬದ ಮನೆಗೆ ಕರೆತಂದು ಸೂಕ್ತ ಪರಿಹಾರ ಕೊಡಿಸಲು ಕ್ರಮ ವಹಿಸುವುದಾಗಿ ತಿಳಿಸಿದರು. ಅಲ್ಲದೆ, ಮೃತರ ಕುಟುಂಬದ ಸದಸ್ಯರಿಗೆ ಅವರ ವಿದ್ಯಾರ್ಹತೆಗೆ ಅನುಗುಣವಾಗಿ ಉದ್ಯೋಗ ಒದಗಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಕುಟುಂಬದ ಆಧಾರಸ್ತಂಭವಾಗಿದ್ದ ರೈತನನ್ನು ಕಳೆದುಕೊಂಡ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಿ ರೈತರ ಜೀವ ಮತ್ತು ಬೆಳೆಗಳನ್ನು ರಕ್ಷಿಸಲು ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

