ನಂಜನಗೂಡು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬ ಹಾಗೂ ಧೂಳಿನ ಸಮಸ್ಯೆ ಖಂಡಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಮೈಸೂರು–ಊಟಿ ರಾಷ್ಟ್ರೀಯ ಹೆದ್ದಾರಿ 276ರಲ್ಲಿ ಶುಕ್ರವಾರ ಹೆದ್ದಾರಿ ಬಂದ್ ಚಳವಳಿ ನಡೆಸಲಾಯಿತು.

ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಹೊಸಳ್ಳಿ ಗೇಟ್ ಬಳಿ ಜಮಾಯಿಸಿದ ನೂರಕ್ಕೂ ಹೆಚ್ಚು ರೈತರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಭಾಗ್ಯರಾಜ್, ನಿಗದಿತ ಅವಧಿಯಲ್ಲಿ ವೈಜ್ಞಾನಿಕವಾಗಿ ಕಾಮಗಾರಿ ಪೂರ್ಣಗೊಳಿಸದಿರುವುದರಿಂದ ವಿಳಂಬವಾಗಿದ್ದು, ಇದರಿಂದ ಐದಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದು, ಧೂಳಿನಿಂದ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು.

ರಸ್ತೆ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಹಾಗೂ ಗಾಯಾಳುಗಳಿಗೆ ಗುತ್ತಿಗೆದಾರರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಪರಿಹಾರ ನೀಡಬೇಕು. ಧೂಳು ಮುಕ್ತ ವಾತಾವರಣ ನಿರ್ಮಿಸಬೇಕು ಹಾಗೂ ಮೇಲ್ಸೇತುವೆಯನ್ನು ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಆಗಮಿಸಿದ ವೃತ್ತ ನಿರೀಕ್ಷಕ ಆನಂದ್ ಅವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳನ್ನು ಕರೆಸಿ, ಸೋಮವಾರದೊಳಗೆ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.

ಸಂಘದ ರಾಜ್ಯ ಖಜಾಂಚಿ ಕೆರೆಹುಂಡಿ ರಾಜಣ್ಣ, ಅಂಡುವಿನಹಳ್ಳಿ ರಾಜು, ವಳಗೆರೆ ಗಣೇಶ್, ಪ್ರಕಾಶ್ ಗಾಂಧಿ, ಎಚ್. ಹನುಮಯ್ಯ, ಮಲಿಯೂರು ಮಹೇಂದ್ರ, ಕಸುವಿನಹಳ್ಳಿ ಮಂಜೇಶ್, ದೇವಿರಮ್ಮನಹಳ್ಳಿ ಹುಂಡಿ ಮಹೇಶ್, ಜೆಸಿಬಿ ಚಿದಂಬರ, ರೇವಣ್ಣ, ಗಾಡಿ ಶ್ರೀಕಂಠಸ್ವಾಮಿ, ಸಿದ್ದಯ್ಯನಹುಂಡಿ ಶಿವಕುಮಾರ್, ಕೀರ್ತಿ, ಟೈಲರ್ ಬಸವರಾಜ್, ಶಿವಣ್ಣ, ಸಿದ್ದಲಿಂಗು ಸೇರಿದಂತೆ ನೂರಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು.