ನಂಜನಗೂಡು: ಬರಪೀಡಿತ ಪ್ರದೇಶದ ರೈತರ ಸಂಪೂರ್ಣ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ನಂಜನಗೂಡು ನಗರದ ಹುಲ್ಲಹಳ್ಳಿ ವೃತ್ತದಲ್ಲಿ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ಹಾಗೂ ಸಂಘಟನೆಯ ಪದಾಧಿಕಾರಿಗಳು ನಂಜನಗೂಡು–ಮೈಸೂರು–ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಮಾಯಿಸಿ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಭಾಗ್ಯರಾಜ್, ರಾಜ್ಯದಲ್ಲಿ ಬರದ ಛಾಯೆ ಆವರಿಸಿದ್ದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಸಮಸ್ಯೆಗಳ ಬಗ್ಗೆ ಗಂಭೀರವಾಗಿ ಚರ್ಚಿಸುತ್ತಿಲ್ಲ. ಕ್ಷೇತ್ರಗಳಲ್ಲಿ ಬರದ ಪ್ರಮಾಣ, ಬೆಳೆ ನಷ್ಟ ಹಾಗೂ ನೀರಿನ ಸಮಸ್ಯೆಗಳ ಬಗ್ಗೆ ಶಾಸಕರು ಮತ್ತು ಸಚಿವರಿಗೆ ಮಾಹಿತಿ ಇಲ್ಲದಿರುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಕೃಷಿ ಬೆಳೆ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಬರಪೀಡಿತ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು. ಕೆರೆ-ಕಟ್ಟೆಗಳಿಗೆ ನೀರು ತುಂಬಿಸಬೇಕು. ರೈತರಿಂದ ಯಾವುದೇ ತೆರಿಗೆ ಅಥವಾ ಹಣ ಪಡೆಯದಂತೆ ಸರ್ಕಾರ ನಿರ್ಣಯ ಕೈಗೊಂಡು, ಅಗತ್ಯವಿದ್ದರೆ ತಮ್ಮ ವೇತನವನ್ನೂ ರೈತರಿಗಾಗಿ ನೀಡುವ ಸಂಕಲ್ಪ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಒತ್ತಾಯಿಸಿದರು.

ತಮಿಳುನಾಡಿಗೆ ನೀರು ಹರಿಸುತ್ತಿರುವುದರಿಂದ ಕಬಿನಿ ವ್ಯಾಪ್ತಿಯ ರೈತರಿಗೆ ತೊಂದರೆಯಾಗುತ್ತಿದೆ. ಕುಡಿಯಲು ಹಾಗೂ ಕೃಷಿಗೆ ನೀರಿಲ್ಲದ ಸಂದರ್ಭದಲ್ಲಿ ಹೊರರಾಜ್ಯಕ್ಕೆ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ರೈತರಿಗೆ ಸಕ್ಕರೆ ಕಾರ್ಖಾನೆಗಳಿಂದ ಬರಬೇಕಿರುವ ಬಾಕಿ ಹಣವನ್ನು ಕೂಡಲೇ ಪಾವತಿಸಬೇಕು. ಪ್ರತಿ ಟನ್ ಕಬ್ಬಿಗೆ ₹6 ಸಾವಿರ ದರ ನಿಗದಿಪಡಿಸಬೇಕು. ಬರದಿಂದ ಸಂಕಷ್ಟದಲ್ಲಿರುವ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಹಾಲಿಗೆ ₹5 ಪ್ರೋತ್ಸಾಹಧನ ನೀಡಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮೇವು ಕೇಂದ್ರಗಳನ್ನು ಆರಂಭಿಸಬೇಕು.

ನಂಜನಗೂಡು ತಾಲ್ಲೂಕಿನ ಕಸುವಿನಹಳ್ಳಿ ಗ್ರಾಮದ ಹೊಸಕೆರೆಗೆ ನೀರು ತುಂಬಿಸಲು ಕ್ರಿಯಾಯೋಜನೆ ರೂಪಿಸಿ ಅಂತರ್ಜಲ ವೃದ್ಧಿಗೆ ಕ್ರಮ ಕೈಗೊಳ್ಳಬೇಕು. ಹುರ ಕೆರೆ ವ್ಯಾಪ್ತಿಯ 26 ಕೆರೆಗಳಿಗೆ ಶೀಘ್ರ ನೀರು ತುಂಬಿಸಬೇಕು. ಇಲ್ಲವಾದರೆ ನೀರಾವರಿ ಇಲಾಖೆಯ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಂದು ಭಾಗ್ಯರಾಜ್ ಎಚ್ಚರಿಕೆ ನೀಡಿದರು.

ಪ್ರತಿಭಟನೆ ವೇಳೆ ಸ್ಥಳಕ್ಕೆ ಆಗಮಿಸಿದ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ರೈತ ಮುಖಂಡರು ಮಾತಿನ ಚಕಮಕಿ ನಡೆಸಿದರು. ರೈತರ ಕರೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಸೀಲ್ದಾರ್ ಗ್ರೇಡ್-2 ನಂದಕಿಶೋರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಸಚಿವರು ಹಾಗೂ ಶಾಸಕರ ವಿರುದ್ಧ ಇನ್ನಷ್ಟು ತೀವ್ರ ಹೋರಾಟ ನಡೆಸಲಾಗುವುದು ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಹಸುವಿನಹಳ್ಳಿ ಮಂಜೇಶ್ ಕುಮಾರ್, ವಳಗೆರೆ ಗಣೇಶ್, ಮುದ್ದಳ್ಳಿ ಮಧು, ಕೆರೆಹುಂಡಿ ರಾಜಣ್ಣ, ಕುಮಾರಸ್ವಾಮಿ, ಮಾದಪ್ಪ, ಗಾಂಧಿ, ದೇವಿರಮ್ಮನಹಳ್ಳಿಹುಂಡಿ ಮಹೇಶ್, ದೇವನೂರು ನಾಗೇಂದ್ರ ಸೇರಿದಂತೆ ಹಲವರು ಹಾಜರಿದ್ದರು.