ನಂಜನಗೂಡು: ನಗರದ ಸ್ವಚ್ಛತೆ, ಆರೋಗ್ಯ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದ್ದು, ಅವರ ಬಹುದಿನಗಳ ಬೇಡಿಕೆಗಳಿಗೆ ಸ್ಪಂದಿಸಿ ಶೀಘ್ರದಲ್ಲೇ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಭರವಸೆ ನೀಡಿದರು.

ನಂಜನಗೂಡು ನಗರದ ನಂದಿ ಕನ್ವೆನ್ಷನ್ ಹಾಲ್‌ನಲ್ಲಿ ಪೌರಾಡಳಿತ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ನಂಜನಗೂಡು ನಗರಸಭೆ ವತಿಯಿಂದ ಆಯೋಜಿಸಿದ್ದ ಪೌರಕಾರ್ಮಿಕರ ಹಬ್ಬ ಕಾರ್ಯಕ್ರಮವನ್ನು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ, ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಪೌರಕಾರ್ಮಿಕರು ನಗರದ ಕಸ ಸಂಗ್ರಹಣೆ, ವಿಲೇವಾರಿ ಸೇರಿದಂತೆ ಸ್ವಚ್ಛತಾ ಕಾರ್ಯಗಳನ್ನು ನಿರ್ವಹಿಸುವ ಮೂಲಕ ಪ್ರತಿನಿತ್ಯ ಸಾರ್ವಜನಿಕರ ಆರೋಗ್ಯ ಮತ್ತು ಪರಿಸರ ಸಂರಕ್ಷಣೆಗೆ ಕೊಡುಗೆ ನೀಡುತ್ತಿದ್ದಾರೆ. ಹಗಲು-ರಾತ್ರಿ ಎನ್ನದೆ ಕರ್ತವ್ಯ ನಿರ್ವಹಿಸುವ ಅವರ ಸೇವೆಗೆ ಸಮಾಜ ಗೌರವ ನೀಡಬೇಕು ಎಂದರು.
ಪೌರಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಆರೋಗ್ಯವನ್ನು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ಗಂಭೀರ ಅನಾರೋಗ್ಯ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಪ್ರಜಾ ಸೇವಾ ಆಂದೋಲನದ ಸಂದರ್ಭದಲ್ಲಿ ನಡೆಯುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳಲ್ಲಿ ಪೌರಕಾರ್ಮಿಕರು ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇತ್ತೀಚಿನ ದಿನಗಳಲ್ಲಿ ಪೌರಕಾರ್ಮಿಕ ಯುವಕರು ಕೂಡ ಹೆಚ್ಚಿನ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯಕ್ಕೂ ಆದ್ಯತೆ ನೀಡುವುದು ಅಗತ್ಯ ಎಂದು ತಿಳಿಸಿದರು.
ಪೌರಕಾರ್ಮಿಕರು ಚಿಕ್ಕದಾದ ಮನೆಗಳಲ್ಲಿ ವಾಸಿಸುತ್ತಿರುವುದು ಗಮನಕ್ಕೆ ಬಂದಿದೆ. ಅವರಿಗೆ ಸ್ವಂತ ನಿವೇಶನ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದ್ದು, ಅತಿ ಶೀಘ್ರದಲ್ಲೇ ನಂಜನಗೂಡಿನಲ್ಲಿ ನಿವೇಶನ ಹಂಚಿಕೆ ಮಾಡಲಾಗುವುದು. ಪೌರಕಾರ್ಮಿಕರ ಮಕ್ಕಳ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಣದ ಮೂಲಕ ಅವರ ಮುಂದಿನ ಪೀಳಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂದರು.
ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಪೌರಕಾರ್ಮಿಕರ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ಪೌರಕಾರ್ಮಿಕರಿಗೆ ಬಹುಮಾನ ವಿತರಿಸಲಾಯಿತು. ಪೌರಕಾರ್ಮಿಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಮಾಜಿ ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ, ನಗರಸಭೆ ಪೌರಾಯುಕ್ತ ಬಸವರಾಜ್, ಸಫಾಯಿ ಕರ್ಮಚಾರಿ ಸಂಘದ ರಾಜ್ಯಾಧ್ಯಕ್ಷ ಡಿ.ಆರ್. ರಾಜು, ನಗರ ಬ್ಲಾಕ್ ಅಧ್ಯಕ್ಷ ಸಿ.ಎಂ. ಶಂಕರ್, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸವೇಗೌಡ, ಗೋವಿಂದರಾಜ್, ಪದ್ಮನಾಭ್, ಗಾಯತ್ರಿ ಮೋಹನ್, ಅಬ್ದುಲ್ ಖಾದರ್, ಮಹದೇವ ಪ್ರಸಾದ್, ಶ್ರೀಧರ್, ಸಿದ್ದಿಕ್, ಮಹೇಶ್, ಬಸವರಾಜ್, ಗಂಗಾಧರ್, ಖಾಲಿದ್ ಸೇರಿದಂತೆ ಹಲವು ಮುಖಂಡರು ಹಾಗೂ ಪೌರಕಾರ್ಮಿಕರು ಹಾಜರಿದ್ದರು.

