ನಂಜನಗೂಡು: ತಾಲ್ಲೂಕಿನ ದಾಸನೂರು ಗ್ರಾಮದಲ್ಲಿ 22.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ವರುಣಾ ವಿಧಾನಸಭಾ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಅವರು ಟೇಪ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.

ಉದ್ಘಾಟನೆಗೂ ಮುನ್ನ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು. 2017ರಲ್ಲಿ ಶಾಲೆ ಆರಂಭಗೊಂಡಿದ್ದು, ಇದೀಗ 6.10 ಎಕರೆ ಪ್ರದೇಶದಲ್ಲಿ ಸುಸಜ್ಜಿತವಾಗಿ ವಸತಿ ಶಾಲೆಯನ್ನು ನಿರ್ಮಿಸಲಾಗಿದೆ. ಪ್ರಸ್ತುತ ಇಲ್ಲಿ 139 ವಿದ್ಯಾರ್ಥಿನಿಯರು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಶೈಕ್ಷಣಿಕ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯವಿರುವ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಶಾಲಾ ಸಂಕೀರ್ಣ, ಬೋಧನಾ ಕೊಠಡಿಗಳು, ಪ್ರಯೋಗಾಲಯ, ಗಣಕಯಂತ್ರ ಕೊಠಡಿ, ಗ್ರಂಥಾಲಯ, ಪ್ರಾಂಶುಪಾಲರ ಕೊಠಡಿ, ಸಿಬ್ಬಂದಿ ಕೊಠಡಿ, ರಂಗಮಂದಿರ, ಭೋಜನಾಲಯ, ವಿದ್ಯಾರ್ಥಿನಿಯರ ವಸತಿ ನಿಲಯ, ಬಾಲಕಿಯರಿಗಾಗಿ ಶೌಚಾಲಯಗಳು, ಶಿಕ್ಷಕರ ವಸತಿ ನಿಲಯ, ಯೋಗ ಕೊಠಡಿ, ಕ್ರೀಡಾ ಕೊಠಡಿ ಹಾಗೂ ಕೈತೊಳೆಯುವ ಸ್ಥಳ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ನಿರ್ಮಿಸಲಾಗಿದೆ.

ಗ್ರಾಮೀಣ ಹಾಗೂ ಹಿಂದುಳಿದ ವರ್ಗಗಳ ಬಾಲಕಿಯರಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ವಸತಿ, ಆಹಾರ, ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಸೂಕ್ತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ವಸತಿ ಶಾಲೆ ನಿರ್ಮಾಣಗೊಂಡಿದೆ. ಇದರಿಂದ ವಿದ್ಯಾರ್ಥಿನಿಯರ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಅನುಕೂಲವಾಗಲಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನಪರಿಷತ್ ಸದಸ್ಯ ಡಾ.ತಿಮ್ಮಯ್ಯ, ವಿವೇಕಾನಂದ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಕಾರ್ಯನಿರ್ವಾಹಕ ನಿರ್ದೇಶಕ ಶಿವಸ್ವಾಮಿ, ತಹಶೀಲ್ದಾರ್ ಡಾ.ಸ್ಮಿತಾ ರಾಮು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ಇಂಜಿನಿಯರ್ ನಿಂಗರಾಜು, ಹೇಮಲತಾ, ಪ್ರಾಂಶುಪಾಲರಾದ ಎಸ್.ಎನ್.ಶೋಭ ಸೇರಿದಂತೆ ವಿವಿಧ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.