ನಂಜನಗೂಡು: ಶುದ್ಧ ಕುಡಿಯುವ ನೀರಿನ ಘಟಕ, ಪದವಿ ಪೂರ್ವ ಕಾಲೇಜು, ಹೆಣ್ಣು ಮಕ್ಕಳ ವಿದ್ಯಾರ್ಥಿ ನಿಲಯ ಹಾಗೂ ಪೊಲೀಸ್ ಠಾಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೂಡ್ಲಾಪುರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಗ್ರಾಮದಲ್ಲಿ ಜಮಾಯಿಸಿದ ಗ್ರಾಮಸ್ಥರು ತಮಟೆ ಬಾರಿಸುತ್ತಾ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಗ್ರಾಮ ಪಂಚಾಯಿತಿ ಕಛೇರಿ ಎದುರು ಧರಣಿ ನಡೆಸಿದರು. ಬಳಿಕ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗಿದರು.

ಗ್ರಾಮದ ಮುಖಂಡ ಕೆ.ವಿ. ಸಿದ್ದರಾಜು ಮಾತನಾಡಿ, ಕೂಡ್ಲಾಪುರ ದೊಡ್ಡ ಗ್ರಾಮವಾಗಿದ್ದು, ಹಿಂದುಳಿದ ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿವೆ. ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜು ಸ್ಥಾಪಿಸುವ ಮೂಲಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಜನಸಂಖ್ಯೆಗೆ ಅನುಗುಣವಾಗಿ ಗ್ರಾಮೀಣ ಬ್ಯಾಂಕ್ ಶಾಖೆ ಹಾಗೂ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಹೆಣ್ಣುಮಕ್ಕಳಿಗಾಗಿ ವಿದ್ಯಾರ್ಥಿ ನಿಲಯ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಕವಲಂದೆ ಗ್ರಾಮ ದೂರದಲ್ಲಿರುವುದರಿಂದ ತುರ್ತು ಸಂದರ್ಭಗಳಲ್ಲಿ ಪೊಲೀಸ್ ಸೇವೆ ಪಡೆಯಲು ಕೂಡ್ಲಾಪುರದಲ್ಲಿ ಪೊಲೀಸ್ ಔಟ್‌ಪೋಸ್ಟ್ ಸ್ಥಾಪಿಸಬೇಕು. ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಕಾರ್ಯನಿರ್ವಹಿಸುತ್ತಿಲ್ಲ. ಕೂಡಲೇ ಹೊಸ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ನಂತರ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಪಿಡಿಓ ವಿವೇಕ್ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಮಹದೇವಯ್ಯ, ಶಿವಕುಮಾರ್, ಸಿದ್ದಶೆಟ್ಟಿ, ಸಿದ್ದರಾಜು, ಮಹದೇವಶೆಟ್ಟಿ, ಸುಧಾಮಣಿ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.