ಮೈಸೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ತೀವ್ರ ಪರಿಷ್ಕರಣೆ (ಎಸ್ಐಆರ್) ಅಂಗವಾಗಿ ನಂಜನಗೂಡು ತಾಲ್ಲೂಕು ಸ್ವೀಪ್ ಚಟುವಟಿಕೆಗೆ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್ ಅವರು ಚಾಲನೆ ನೀಡಿದರು.
ನಂಜನಗೂಡು ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ವಿಶೇಷ ಅಭಿಯಾನದ ಭಿತ್ತಿಪತ್ರ ಬಿಡುಗಡೆ ಮಾಡಿ ಮಾತನಾಡಿದ ಅವರು, ಅರ್ಹ ನಾಗರಿಕರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವುದು ಹಾಗೂ ಪಟ್ಟಿಯನ್ನು ದೋಷರಹಿತಗೊಳಿಸುವ ಉದ್ದೇಶದಿಂದ ಎಸ್ಐಆರ್ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದರು.
ಸೆ.19 ಮತ್ತು 20ರಂದು ನಡೆಯುವ ವಿಶೇಷ ಅಭಿಯಾನದ ಸಂದರ್ಭದಲ್ಲಿ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಪರಿಶೀಲಿಸಿಕೊಳ್ಳಬೇಕು. ಹೆಸರು ಸೇರ್ಪಡೆ, ಹೆಸರು ತೆಗೆದುಹಾಕುವುದು, ಮತದಾರರ ಚೀಟಿಯಲ್ಲಿನ ತಿದ್ದುಪಡಿ ಹಾಗೂ ವಿಳಾಸ ಬದಲಾವಣೆಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ಬಸ್, ರೈಲು ನಿಲ್ದಾಣ, ಮಾರುಕಟ್ಟೆಗಳಲ್ಲಿ ಜಾಗೃತಿ
ಎಸ್ಐಆರ್ ವಿಶೇಷ ಅಭಿಯಾನದ ಅಂಗವಾಗಿ ತಾಲ್ಲೂಕು ಸ್ವೀಪ್ ಸಮಿತಿಯಿಂದ ನಗರದ ಮಾರುಕಟ್ಟೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಜನಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಯಿತು. ಸಾರ್ವಜನಿಕರಿಗೆ ಕರಪತ್ರಗಳನ್ನು ವಿತರಿಸಿ, ಭಿತ್ತಿಪತ್ರಗಳನ್ನು ಅಂಟಿಸುವ ಮೂಲಕ ಹಾಗೂ ವಿಶೇಷ ಅಭಿಯಾನದ ಮಾಹಿತಿಯುಳ್ಳ ಧ್ವನಿ ತುಣುಕುಗಳನ್ನು ಪ್ರಸಾರ ಮಾಡುವ ಮೂಲಕ ಮತದಾರರಲ್ಲಿ ಅರಿವು ಮೂಡಿಸಲಾಯಿತು.
ಯಾವುದೇ ಅರ್ಹ ಮತದಾರರು ಮತದಾನದಿಂದ ಹೊರಗುಳಿಯಬಾರದು ಎಂಬ ಉದ್ದೇಶದಿಂದ ನಡೆಯುತ್ತಿರುವ ಈ ಅಭಿಯಾನದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಯಿತು. 18 ವರ್ಷ ಪೂರ್ಣಗೊಂಡಿರುವ ಅರ್ಹ ಯುವ ಮತದಾರರು ಕೂಡ ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಿಕೊಳ್ಳುವಂತೆ ಜಾಗೃತಿ ಮೂಡಿಸಲಾಯಿತು. ಎಲ್ಲಾ ಮತಗಟ್ಟೆಗಳಲ್ಲಿ ಮತಗಟ್ಟೆ ಅಧಿಕಾರಿಗಳು ಸಾರ್ವಜನಿಕರಿಗೆ ಲಭ್ಯವಿದ್ದು, ಮತದಾರರು ತಪ್ಪದೇ ಭೇಟಿ ನೀಡಿ ತಮ್ಮ ಹೆಸರು ಹಾಗೂ ವಿವರಗಳನ್ನು ಪರಿಶೀಲಿಸಿಕೊಂಡು ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳುವಂತೆ ತಿಳಿಸಿದರು.

