ನಂಜನಗೂಡು: ರಾಜ್ಯಾದ್ಯಂತ ಇಂದಿನಿಂದ ಪಿಯು ಕಾಲೇಜುಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳನ್ನು ಅದ್ದೂರಿಯಾಗಿ ಸ್ವಾಗತ ಕೋರಲಾಗುತ್ತಿದೆ. ಅದರಂತೆ ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜು ಪ್ರಾರಂಭೋತ್ಸವ ಹಿನ್ನೆಲೆಯಲ್ಲಿ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಸಿಹಿ ತಿನ್ನಿಸುವ ಮೂಲಕ ಸ್ವಾಗತ ಕೋರಿದರು.

ಕಾರ್ಯಕ್ರಮದಲ್ಲಿ ದೊಡ್ಡಕವಲಂದೆ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಪರ್ಹೀನ್ ಬೇಗಂ ಮಾತನಾಡಿ, ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದೊಡ್ಡ ಕವಲಂದೆ ಕಾಲೇಜು ಉತ್ತಮ ಸಾಧನೆ ಮಾಡಿದೆ. ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಕಾಲೇಜಿನಲ್ಲಿ ಉತ್ತಮ ವಾತಾವರಣ ಮತ್ತು ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಹೆಚ್ಚು ವಿದ್ಯಾರ್ಥಿಗಳು ಸರ್ಕಾರಿ ಕಾಲೇಜಿಗೆ ದಾಖಲಾತಿ ಪಡೆದುಕೊಳ್ಳಬೇಕು. ಉತ್ತಮ ವಿದ್ಯಾಭ್ಯಾಸ ಮಾಡಿ ತಂದೆ ತಾಯಿಗಳಿಗೆ ಹಾಗೂ ಗುರುಗಳಿಗೆ ಕೀರ್ತಿ ತರಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ನಾಜೀಮ್ ಉಲ್ಲಾ ಖಾನ್, ಪ್ರಾಂಶುಪಾಲರಾದ ಡಾ.ಸರಳ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ನಜೀಬುಲ್ಲಾಖಾನ್, ಪತ್ರಕರ್ತರಾದ ಸಿಎಂ ಸುಗಂಧರಾಜು, ಪಿ. ಶಿವಕುಮಾರ್, ಉಪನ್ಯಾಸಕರಾದ ಡಾ.ಶಶಿಧರ್, ಯೋಗೇಶ್, ಮೇನಕಾರಾಣಿ, ಗೀತಾ, ಹೇಮಾ, ಮಹದೇವಸ್ವಾಮಿ, ನಟರಾಜ್ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.