ನಂಜನಗೂಡು: ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಸರಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಆಶ್ರಯ ಚಾರಿಟೀಸ್ ವತಿಯಿಂದ ನೀಡುತ್ತಿರುವ ಕಲಿಕಾ ಸಾಮಗ್ರಿಗಳನ್ನು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ವಿತರಣೆ ಮಾಡಿದರು.
ಬಳಿಕ ಮಾತನಾಡಿದ ಅವರು, ಆಶ್ರಯ ಚಾರಿಟೀಸ್ ಟ್ರಸ್ಟ್ ನವರು ಉತ್ತಮ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಸರಗೂರು ಶಾಲೆಯಲ್ಲಿ ಎರಡನೇ ಬಾರಿಗೆ ಶಾಲಾ ಮಕ್ಕಳಿಗೆ ಸಮವಸ್ತ್ರ, ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡಿಕೊಂಡು ಬಂದಿದ್ದಾರೆ.
ಈ ಸಮಾಜದಲ್ಲಿ ಎಲ್ಲರು ಸ್ವಾರ್ಥಿಯಾಗಿದ್ದಾರೆ. ಮನುಷ್ಯ ಎಲ್ಲವೂ ನನಗೆ ಬೇಕು ಎನ್ನುತ್ತಿದ್ದಾನೆ. ಇಂತಹ ನಡುವೆ ನಿರಂತರವಾಗಿ ಸಮಾಜ ಸೇವೆ ಮಾಡಿಕೊಂಡು ಬರಲಾಗುತ್ತಿದೆ ಎಂದರು. ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರವಾಸ ಕೈಗೊಂಡಿರುವ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಸರಗೂರು , ಬಸವನಪುರ, ನಗರ್ಲೆ, ಹನಿಯಂಬಳ್ಳಿ, ಕಬ್ಬಳಗೆರೆಹುಂಡಿ, ಗೋಣಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ತೆರಳಿ ಗ್ರಾಮಸ್ಥರ ಸಮಸ್ಯೆಯನ್ನು ಆಲಿಸಿದರು.
ಸರಗೂರು ಗ್ರಾಮದಲ್ಲಿ ಸ್ಮಶಾನ ಇಲ್ಲದೆ ಗ್ರಾಮಸ್ಥರ ಪರದಾಡುತ್ತಿದ್ದು, ನಮಗೆ ಸ್ಮಶಾನ ಭೂಮಿ ಕಲ್ಪಿಸಿಕೊಡಿ, ಕೋತಿಗಳ ಹಾವಳಿ ಹೆಚ್ಚಾಗಿದ್ದು ಕೋತಿಗಳ ಹಾವಳಿ ತಪ್ಪಿಸಿ, ಅಂಗನವಾಡಿ ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸಿ ಎಂದು ಗ್ರಾಮಸ್ಥರು ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಕೂಡಲೇ ಸ್ಮಶಾನವನ್ನು ಗುರುತು ಮಾಡಬೇಕು ಎಂದು ಕಂದಾಯ ಇಲಾಖೆಯ ಉಪ ತಹಶೀಲ್ದಾರ್ ಮಹೇಶ್ ಅವರಿಗೆ ಸೂಚನೆ ನೀಡಿದ್ದಾರೆ. ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಯನ್ನು ಪೂರ್ಣಗೊಳಿಸಿ, ಕುಡಿಯುವ ನೀರನ್ನು ಪೂರೈಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಅಂಗನವಾಡಿ ಕಟ್ಟಡವನ್ನು ದುರಸ್ತಿ ಪಡಿಸಲಾಗುವುದು. ಹೆಚ್ಚುವರಿ ಅನುದಾನವನ್ನು ನೀಡುತ್ತೇನೆ. ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಇಲ್ಲದಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಸಿ ಬಸವರಾಜು, ಎಸ್.ಡಿ.ಎಂ.ಸಿ ಅಧ್ಯಕ್ಷೆ ಉಮಾ, ಮರಿಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಮಾಜಿ ತಾ.ಪಂ ಅಧ್ಯಕ್ಷೆ ಮಂಜುಳಾ, ಗುರುಪಾದ, ಆಶ್ರಯ ಚಾರಿಟೀಸ್ ಅಧ್ಯಕ್ಷ ಸಂಜಯ್ ಸಿ ಪಾಲ್, ಗಿರಿಧರ್, ಗ್ರಾ.ಪಂ ಸದಸ್ಯರಾದ ಸಿದ್ಧಾರ್ಥ್, ಶಿವಮ್ಮ, ಭದ್ರನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಸಿದ್ದರಾಮೇಗೌಡ, ಸಿದ್ದರಾಜು, ಪುಟ್ಟಸ್ವಾಮಿ ಸೇರಿದಂತೆ ಹಲವರು ಭಾಗವಹಿಸಿದ್ದರು.

