ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಇಲಿಜ್ವರ ನಿಯಂತ್ರಣ ಕಾರ್ಯಕ್ರಮಗಳನ್ನು ಸ್ಥಳೀಯ ಗ್ರಾಮ ಪಂಚಾಯತಿಗಳ ಸಮನ್ವಯ ಮತ್ತು ಸಹಕಾರದೊಂದಿಗೆ ಯಶಸ್ವಿಯಾಗಿ ನಿರ್ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಆರ್.ವೆಂಕಟೇಶ್ ಅವರು ವ್ಯೆದ್ಯಾಧಿಕಾರಿಗಳು ಹಾಗೂ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲ್ಲಾಖೆ ಮತ್ತು ಜಿಲ್ಲಾ ಸರ್ವೇಕ್ಷಣಾ ಘಟಕ ವತಿಯಿಂದ ಇಲಿಜ್ವರ ನಿಯಂತ್ರಣ ಕುರಿತು ಕೊಡಗು ಜಿಲ್ಲೆಯ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರದ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯೆದ್ಯಾಧಿಕಾರಿಗಳಿಗೆ ಹಾಗೂ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆದ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ.ಎನ್.ಆನಂದ್ ಅವರು ವ್ಯೆದ್ಯಾಧಿಕಾರಿಗಳಿಗೆ ಹಾಗೂ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳಿಗೆ ಇಲಿಜ್ವರದ ನಿಯಂತ್ರಣ ಕ್ರಮಗಳ ಬಗ್ಗೆ ಮಾಹಿತಿ ಒದಗಿಸಿದರು.
ಕೊಡಗು ವ್ಯೆದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಮುದಾಯ ಆರೋಗ್ಯ ವಿಭಾಗದ ಸಹ ಪ್ರಾಧ್ಯಾಪಕ ಡಾ.ಮಹೇಶ್. ಎಸ್.ಎಚ್ ಅವರು ಇಲಿಜ್ವರ ರೋಗ ಹರಡುವ ರೀತಿ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.