News Karnataka Kannada
Wednesday, May 01 2024
ಮಡಿಕೇರಿ

ಜೆಡಿಎಸ್‌ ರಾಜ್ಯಾದ್ಯಕ್ಷ ಕುಮಾರ ಸ್ವಾಮಿ ಎದುರಲ್ಲೇ ಅಸಮಾಧಾನ ಸ್ಪೋಟ

Jds Meeting
Photo Credit :

ಮಡಿಕೇರಿ ; : ಜೆಡಿಎಸ್ ಕಾರ್ಯಕಾರಿಣಿ ಸಭೆಯಲ್ಲಿ ಕಾರ್ಯಕರ್ತರ ನಡುವಿನ ಅಸಮಾಧಾನ ಸ್ಫೋಟಗೊಂಡಿತು. ಜಿಲ್ಲಾ ಜೆಡಿಎಸ್‌ಗೆ ವಿವಿಧ ಸಮಿತಿಗಳನ್ನು ರಚಿಸಿ ಪದಾಧಿಕಾರಿಗಳನ್ನು ನೇಮಿಸಲಾಗಿದ್ದು, ಇವರುಗಳಿಗೆ ಆದೇಶ ಪ್ರತಿ ವಿತರಿಸುವ ಸಂದರ್ಭ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಯಾವುದೇ ಸಭೆ ನಡೆಸದೇ ಏಕಾಏಕಿ ಪಕ್ಷದ ಪದಾಧಿಕಾರಿಗಳನ್ನು ನೇಮಿಸಲಾಗಿದೆ. ಇದು ಸರಿಯಲ್ಲ. ಮುಂದಿನ ದಿನಗಳಲ್ಲಿ ಸಭೆ ನಡೆಸಿ, ಸ್ಥಳೀಯವಾಗಿ ಅಭಿಪ್ರಾಯ ಸಂಗ್ರಹಿಸಿ ಸಮಿತಿಗಳನ್ನು ರಚಿಸಬೇಕೆಂದು ಕಾರ್ಯಕರ್ತರು ಆಗ್ರಹಿಸಿದರು. ಇದಕ್ಕೆ ಪ್ರಮುಖರು ಸೊಪ್ಪು ಹಾಕದ ಹಿನ್ನೆಲೆ ಸಭೆಯಲ್ಲಿ ಗೊಂದಲ, ಗದ್ದಲ ಉಂಟಾಯಿತು. ಆಕ್ಷೇಪ ವ್ಯಕ್ತಪಡಿಸಿದ ಸದಸ್ಯರು ಸಭೆಯಿಂದ ನಿರ್ಗಮಿಸಿದ ನಂತರ ನೂತನ ಪದಾಧಿಕಾರಿಗಳಿಗೆ ಆದೇಶ ಪ್ರತಿ ನೀಡಲಾಯಿತು.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದೊಂದಿಗೆ ರಾಜ್ಯ ಸರ್ಕಾರವೂ ಸಹ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಇಂತಹ ಪಕ್ಷಕ್ಕೆ ಮುಂದಿನ ಚುನಾವಣೆಗಳಲ್ಲಿ ಮತದಾರರು ತಕ್ಕ ಪಾಠ ಕಲಿಸಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಹೇಳಿದರು.
ಜೆಡಿಎಸ್ ವತಿಯಿಂದ ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷಗಳಿಂದ ಜನರು ನಿರಂತರವಾಗಿ ಸಂಕಷ್ಟ ಎದುರಿಸುತ್ತಿದ್ದಾರೆ. ಚುನಾವಣಾ ಪೂರ್ವದಲ್ಲಿ ನರೇಂದ್ರ ಮೋದಿ ನೀಡಿದ್ದ ಭರವಸೆಗಳೂ ಹುಸಿಯಾಗಿವೆ. ರಾಜ್ಯ ಸರ್ಕಾರದಿಂದಲೂ ಅಭಿವೃದ್ಧಿ ಶೂನ್ಯವಾಗಿದೆ ಎಂದು ಆರೋಪಿಸಿದರು.
2018ರಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕೊಡಗಿನಲ್ಲಿ ಮನೆಗಳನ್ನು ಕಳೆದುಕೊಂಡ ಸಂದರ್ಭ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು 800 ಮನೆಗಳನ್ನು ನಿರ್ಮಿಸಲು ಅನುದಾನ ನೀಡಿದ್ದರು. ಇದರೊಂದಿಗೆ ಆಡಳಿತವನ್ನು ಸುಧಾರಿಸುವ ನಿಟ್ಟಿನಲ್ಲಿ 2 ಹೆಚ್ಚುವರಿ ತಾಲೂಕನ್ನು ರಚಿಸಿದ್ದಾರೆ. ಇಂತಹ ಯೋಜನೆಗಳ ಬಗ್ಗೆ ಕಾರ್ಯಕರ್ತರು ಪ್ರತಿ ಮನೆಗಳಿಗೂ ಮಾಹಿತಿ ನೀಡಬೇಕು ಎಂದರು.
ಮುಖ್ಯಮAತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮಲೆನಾಡು ಭಾಗವನ್ನು ಕಡೆಗಣಿಸಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ ಭಾಗಕ್ಕೆ ಒಂದೇ ಒಂದು ಸಚಿವ ಸ್ಥಾನ ನೀಡಿಲ್ಲ. ಈ ಭಾಗವನ್ನು ಬಿಜೆಪಿ ನಿರ್ಲಕ್ಷಿಸಿದೆ ಎಂದು ದೂರಿದರು.
ಸಭೆಯಲ್ಲಿದ್ದ ಕೊಡಗು ಉಸ್ತುವಾರಿ ಬಿ.ಬಿ. ಲಿಂಗಯ್ಯ ಮಾತನಾಡಿ, ಕೊಡಗಿನಲ್ಲಿ ನಿರಂತರವಾಗಿ ಮತದಾರರು ಬಿಜೆಪಿಯನ್ನು ಬೆಂಬಲಿಸುತ್ತಾ ಬಂದಿದ್ದರೂ ಹೆಚ್ಚಿನ ಪ್ರಗತಿ ಸಾಧ್ಯವಾಗಿಲ್ಲ. ಈ ಹಿನ್ನೆಲೆ ಬಿಜೆಪಿ ಎಂಬ ಆಕ್ಟೋಪಸ್ ಕೈಯಿಂದ ಕೊಡಗನ್ನು ಬಿಡುಗಡೆ ಮಾಡಬೇಕು ಎಂದು ಕರೆ ನೀಡಿದರು.
ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಬಿ. ಗಣೇಶ್ ಮಾತನಾಡಿ, ಬಿಜೆಪಿ ಕೋಮುವಾದವನ್ನೇ ಮುಂದಿಟ್ಟುಕೊಂಡು ಚುನಾವಣೆ ಗೆಲ್ಲುತ್ತಿದೆ. ಆದರೆ ಜನರಿಗೆ ಸೌಲಭ್ಯ ಒದಗಿಸುವ ಕೆಲಸ ಮಾಡುತ್ತಿಲ್ಲ. 2023ರ ಚುನಾವಣೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕು. ಇದಕ್ಕೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಯಾವುದೇ ರೀತಿಯ ತ್ಯಾಗಕ್ಕೂ ಸಿದ್ಧರಾಗಬೇಕು ಎಂದರು.
ಸಭೆಯ ಅಧ್ಯಕ್ಷತೆಯನ್ನು ಜೆಡಿಎಸ್ ತಾಲೂಕು ಅಧ್ಯಕ್ಷ ಸಿ.ಎಸ್. ನಾಗರಾಜು ವಹಿಸಿದ್ದರು. ಪಕ್ಷದ ಮುಖಂಡರಾದ ಕೆ.ಟಿ.ಪರಮೇಶ್, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್, ಕಾರ್ಯಾಧ್ಯಕ್ಷ ಬೋಜಪ್ಪ, ಯುವ ಘಟಕದ ಅಧ್ಯಕ್ಷ ಸಿ.ಎಲ್. ವಿಶ್ವ ಅವರುಗಳು ಮಾತನಾಡಿದರು.
ವೇದಿಕೆಯಲ್ಲಿ ಜೆಡಿಎಸ್ ಮುಖಂಡರುಗಳಾದ ಆದಿಲ್ ಪಾಷಾ, ವಿಠಲ್‌ಗೌಡ, ಜಲಾ ಹೂವಯ್ಯ, ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಎಂ.ಎ. ರುಬೀನಾ, ಹಿಂದುಳಿದ ಘಟಕದ ಅಧ್ಯಕ್ಷ ಎ.ಜಿ. ವಿಜಯ, ಯುವ ಘಟಕದ ಅಧ್ಯಕ್ಷ ತ್ರಿಶೂಲ್, ಕುಶಾಲನಗರ ತಾಲೂಕು ಅಧ್ಯಕ್ಷ ರವಿಕುಮಾರ್, ಪ್ರಮುಖರಾದ ಸೈಫುದ್ದೀನ್, ಡೆನ್ನಿ ಬೋರಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು